ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ : ಸೋಲಿನ ಬಳಿಕ ಮುಂದುವರೆದ ರಾಜೀನಾಮೆ ಪರ್ವ

ಲೋಕಸಭೆ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಪಕ್ಷದಿಂದ ದೂರವಾಗುವವರ ಸಂಖ್ಯೆ ಹೆಚ್ಚಾಗಿದೆ.

ಸಂಕಷ್ಟದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಪಾರು ಮಾಡುವ ನಿಟ್ಟಿನಲ್ಲಿ ಪಕ್ಷದ ನಾಯಕರು ಪ್ಲಾನ್ ಮಾಡಿಕೊಂಡಿದ್ದು, ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸಲು ಮುಂದಾಗಿದ್ದಾರೆ. ಆದರೆ, ಪಕ್ಷದಲ್ಲಿನ ಬೆಳವಣಿಗೆಗಳ ಕಾರಣದಿಂದ ಅನೇಕ ರಾಜ್ಯಗಳಲ್ಲಿ ನಾಯಕರು, ಜನಪ್ರತಿನಿಧಿಗಳು ಪಕ್ಷದಿಂದ ದೂರವಾಗತೊಡಗಿದ್ದಾರೆ.

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಯುವ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ನಡುವಿನ ಕಿತ್ತಾಟದಿಂದಾಗಿ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯಾಗುವ ಸಾಧ್ಯತೆ ಇದೆ. ಜ್ಯೋತಿರಾದಿತ್ಯ ಸಿಂಧ್ಯಾ ಕಾಂಗ್ರೆಸ್ ಪಕ್ಷವನ್ನು ತೊರೆಯುವ ಸೂಚನೆ ನೀಡಿದ್ದಾರೆ.

ಮಧ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡದಿದ್ದರೆ ಪಕ್ಷ ಬಿಡುವುದಾಗಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಸರ್ಕಾರ ರಚನೆಯಾದ ಬಳಿಕ ಕಡೆಗಣಿಸಲಾಗುತ್ತಿದೆ. ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತಮ್ಮನ್ನು ಕಡೆಗಣಿಸಿ ಕಮಲ್ ನಾಥ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಲಾಗಿದೆ. ತಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಜ್ಯೋತಿರಾದಿತ್ಯ ಸಿಂಧ್ಯಾ ಅಸಮಾಧಾನಗೊಂಡಿದ್ದಾರೆ.

30 ವರ್ಷದ ಹಿಂದೆ ಜ್ಯೋತಿರಾದಿತ್ಯ ಸಿಂಧ್ಯಾ ಅವರ ತಂದೆ ಮಾಧವರಾವ್ ಸಿಂಧ್ಯಾ ಅವರಿಗೂ ಕಾಂಗ್ರೆಸ್, ಮುಖ್ಯಮಂತ್ರಿ ಹುದ್ದೆ ನೀಡದೆ ಕಡೆಗಣಿಸಿತ್ತು. ಈಗಲೂ ಅದು ಪುನರಾವರ್ತನೆಯಾಗಿದೆ. ಈ ಬೆಳವಣಿಗೆಗಳಿಂದ ಬೇಸತ್ತು ಜ್ಯೋತಿರಾದಿತ್ಯ ಸಿಂಧ್ಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Leave a Reply