ರಾಜ್ಯದಲ್ಲಿ ಫೋನ್ ಟ್ಯಾಪಿಂಗ್ ಭಾರೀ ಸದ್ದು : 6 ಸಾವಿರ ಕರೆಗಳ ಕದ್ದಾಲಿಕೆ…!

ರಾಜ್ಯದಲ್ಲಿ ಫೋನ್ ಟ್ಯಾಪಿಂಗ್ ಭಾರೀ ಸದ್ದು ಮಾಡುತ್ತಿದ್ದು, 6 ಸಾವಿರ ಕರೆಗಳನ್ನು ಕದ್ದಾಲಿಕೆ ಮಾಡಲಾಗಿರುವ ವಿಚಾರ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬರೋಬ್ಬರಿ 34 ಜಿಬಿಯಷ್ಟು ಆಡಿಯೋ ರೆಕಾರ್ಡ್ ಆಗಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದ್ದು, ಸರ್ಕಾರ ಇಂದು ಈ ಪ್ರಕರಣವನ್ನು ಸಿಐಡಿಗೆ ನೀಡುವ ಸಾಧ್ಯತೆಯಿದೆ.

ದೊಡ್ಡ ದೊಡ್ಡ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಪ್ರಾಥಮಿಕ ತನಿಖೆ ಈಗಾಗಲೇ ನಡೆದಿದೆ. ಸಂದೀಪ್ ಪಾಟೀಲ್ ಹಿರಿಯ ಪೊಲೀಸ್ ಅಧಿಕಾರಿಯ ಸೂಚನೆಯ ಮೇರೆಗೆ ಫೋನ್ ಕದ್ದಾಲಿಕೆ ನಡೆದಿದೆ ಎಂದು ವರದಿ ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಸರ್ಕಾರ ಬೀಳಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ಕರೆಗಳನ್ನು ಕದ್ದಾಲಿಸಲಾಗಿದೆ ಎನ್ನುವ ಗಂಭೀರ ಆರೋಪ ಈಗ ಎಚ್‍ಡಿಕೆಯ ಮೇಲೆ ಬಂದಿದೆ. ಮಾಧ್ಯಮಗಳ ಜೊತೆ ಮಾತನಾಡಿದ್ದ ಬಿಜೆಪಿ ಮುಖಂಡ ಆರ್. ಅಶೋಕ್, ಕುಮಾರಸ್ವಾಮಿ ಅವಧಿಯಲ್ಲಿ ರಾಜ್ಯ ನಾಯಕರ ಫೋನ್ ಕರೆ ಟ್ಯಾಪ್ ಮಾಡಲಾಗುತ್ತಿದೆ ಎಂದು ಹೇಳಿದ್ದೆ. ಅದು ಈಗ ನಿಜವಾಗಿದೆ. ಸಿದ್ದರಾಮಯ್ಯನವರ ಮೇಲೆ ಕುಮಾರಸ್ವಾಮಿ ಅವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಅವರ ಫೋನನ್ನು ಕದ್ದಾಲಿಸಲಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

ಅನರ್ಹ ಶಾಸಕ ವಿಶ್ವನಾಥ್ ಪ್ರತಿಕ್ರಿಯಿಸಿ, ಇದೇ ವೇಳೆ ರಾಜ್ಯದಲ್ಲಿ ದೂರವಾಣಿ ಕದ್ದಾಲಿಕೆ ದೊಡ್ಡ ಮಟ್ಟದಲ್ಲಿ ನಡೆದಿದೆ. ಸಿದ್ದರಾಮಯ್ಯ ಅವರ ಪಿಎ ವೆಂಕಟೇಶ್ ಎಂಬವರ ಫೋನ್ ಕದ್ದಾಲಿಕೆ ಮಾಡಲಾಗಿದೆ. ರೆಬೆಲ್ ಶಾಸಕರ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ. ಹೀಗೆ ಕದ್ದಾಲಿಕೆ ಮಾಡಿ ರೆಬೆಲ್ ಶಾಸಕರನ್ನು ಸಿಎಂ (ಹೆಚ್‍ಡಿಕೆ) ಕಚೇರಿಯಿಂದ ಬ್ಲಾಕ್ ಮೇಲ್ ಮಾಡಲಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದವನ ದೂರವಾಣಿಯನ್ನು ಜೆಡಿಎಸ್ ಮುಖ್ಯಮಂತ್ರಿಯೇ ಕದ್ದಾಲಿಕೆ ಮಾಡಿದ್ದಾರೆ. ನಮ್ಮ ಮೇಲೆ ನಿಮಗೆ ವಿಶ್ವಾಸ ಇರಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ವಿಶ್ವನಾಥ್ ಮಾತನಾಡಿರುವುದು ಸಿಕ್ಕಿದೆ ಚೀ ಚೀ ಕೇಳಿಸಿಕೊಳ್ಳಲು ಆಗಲ್ಲ ಎಂದು ಕುಮಾರಸ್ವಾಮಿ ಸದನದಲ್ಲಿ ಹೇಳಿದ್ದರು. ನಾನು ಮೊಬೈಲ್‍ನಲ್ಲಿ ಸಾವಿರ ಮಾತನಾಡುತ್ತೇನೆ. ಹೀಗೆ ಮಾತಾಡಬೇಕು ಎಂದು ಹೇಳೋಕೆ ನೀವು ಯಾರು? ಬೆಂಗಳೂರು ಪೊಲೀಸ್ ಆಯುಕ್ತರ ದೂರವಾಣಿಯೆ ಕದ್ದಾಲಿಕೆ ಮಾಡಲಾಗಿದೆ. ರಾಜ್ಯದ ಸಿಎಂ ಆಗಿ ಹೆಚ್‍ಡಿಕೆ ಎಲ್ಲಾ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಳ್ಳಿ ಕಡೆ ಮನೆಯವರಿಗೆ ಮನೆಯವರೇ ಮದ್ದು ಹಾಕುತ್ತಾರೆ ಎನ್ನುವ ಮಾತಿದೆ ಇದು ಅದೇ ಕಥೆ ಎಂದು ವ್ಯಂಗ್ಯವಾಡಿದ್ದಾರೆ.

Leave a Reply