ಇಂದು ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ : ಸ್ವಾಗತಕ್ಕೆ ನಗರವಿಡೀ ಕೇಸರಿ ಮಯ

ದೇಶಾದ್ಯಾಂತ ಪ್ರತಿಭಟನೆಗೆ ಕಾರಣವಾಗಿರುವ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಇಂದು ಮಧ್ಯಾಹ್ನ 12.15ಕ್ಕೆ ಎಚ್ ಎಎಲ್ ವಿಮಾನ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಬಂದಿಳಿಯಲಿದ್ದಾರೆ. ನಂತರ ಬೆಂಗಳೂರಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ನಂತರ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ಪೌರತ್ವ ಕಾಯ್ದೆ ಕುರಿತಾದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಭದ್ರತೆಗಾಗಿ 1,400 ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ 1 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ. ಅಮಿತ್ ಶಾ ಸ್ವಾಗತಕ್ಕೆ ನಗರವಿಡೀ ಕೇಸರಿ ಮಯವಾಗಿದ್ದು, ಎಲ್ಲೆಡೆ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಸಂಜೆ 4.30ರಿಂದ 6.30ರವರೆಗೆ ನಡೆಯಲಿರುವ ಸಮಾವೇಶಕ್ಕೆ 30-60 ಚದುರಡಿ ಸುತ್ತಳತೆಯ ಬೃಹತ್ ವೇದಿಕೆ ನಿರ್ಮಿಸಲಾಗಿದೆ.

ವೇದಿಕೆಯಲ್ಲಿ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸಚಿವರಾದ ಸುರೇಷ್ ಅಂಗಡಿ, ಪ್ರಹ್ಲಾದ್ ಜೋಶಷಿ, ಸದಾನಂದ ಗೌಡ, ಉಪಮುಖ್ಯಮಂತ್ರಿಗಳಾದ ಸವದಿ, ಕಾರಜೋಳ ಸಚಿವರಾದ ಜಗದೀಶ್ ಶೆಟ್ಟರ್, ಅಶೋಕ ಸೇರಿದಂತೆ 30ಕ್ಕೂ ಹೆಚ್ಚು ಮುಖಂಡರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ತೊಡಗಿದ್ದಾರೆ. ಹುಬ್ಬಳ್ಳಿ, ಧಾರವಾಡ, ಮಹಾನಗರ ಜಿಲ್ಲೆಯಲ್ಲದೆ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಶುಕ್ರವಾರದಿಂದಲೇ ಕಟ್ಟೆಚ್ಚರವಹಿಸಿದ್ದಾರೆ. ಈಗಾಗಲೇ ಎನ್‌ಎಸ್’ಜಿ 2 ತಂಡಗಳು ನಗರಕ್ಕೆ ಆಗಮಿಸಿದ್ದು, ಸಮಾವೇಶದ ಸ್ಥಳ ಪರಿಶೀಲಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights