ಗಗನಕ್ಕೇರಿದ ಈರುಳ್ಳಿ ಬೆಲೆ : ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ

ದೇಶದ ಅನೇಕ ರಾಜ್ಯಗಳಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಈರುಳ್ಳಿ ಬೆಲೆಯಿಂದ ಗ್ರಾಹಕರು ಕಣ್ಣೀರು ಹಾಕುವಂತಾಗಿದ್ದು, ದರ ಹೆಚ್ಚಳಕ್ಕೆ ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ವಿಧದ ಈರುಳ್ಳಿಗಳನ್ನು ವಿದೇಶಗಳಿಗೆ ರಫ್ತು ಮಾಡುವುದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ನಿಷೇಧಿಸಿದೆ.

ಈ ಸಂಬಂಧ ಕೇಂದ್ರ ಕೃಷಿ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿ ಈರುಳ್ಳಿ ರಫ್ತುಗಳಿಗೆ ಮುಂದಿನ ಆದೇಶದ ತನಕ ಕಡಿವಾಣ ಹಾಕುವಂತೆ ಸೂಚಿಸಿದೆ. ದೇಶದಲ್ಲಿ ಈರುಳ್ಳಿ ಉತ್ಪಾದನೆ ಕುಂಠಿತವಾಗಿದ್ದು, ಬೆಲೆ ಏರಿಕೆಯಾಗುತ್ತಿದೆ.

ಈ ಬಾರಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟವಾದ ಪರಿಣಾಮ ಈರುಳ್ಳಿ ಬೆಲೆ ಗಗನಕ್ಕೇರಿದೆ. ಹೀಗಾಗಿ ಕೇಂದ್ರ ಸರ್ಕಾರ ಬೆಲೆ ನಿಯಂತ್ರಣಕ್ಕಾಗಿ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ್ದು, ಇದರಿಂದಾಗಿ ರೈತರ ಬೆಳೆಯ ಬೆಲೆ ಮಾತ್ರ ಕಡಿಮೆಯಾಗಿದ್ದು ಗ್ರಾಹಕರಿಗೆ ಮಾತ್ರ ಈರುಳ್ಳಿ ಕಣ್ಣೀರು ತರಿಸುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ಈರುಳ್ಳಿ ದರ ಕೆಜಿಗೆ 100 ರಿಂದ 130 ರೂ. ತಲುಪಿದ್ದು, ಬಳಕೆದಾರರ ಜೇಬು ಸುಡುತ್ತಿದೆ. ಪೂರೈಕೆಯಲ್ಲಿ ವ್ಯತ್ಯಯವಾಗಿರುವುದೇ ಈರುಳ್ಳಿ ಬೆಲೆ ಏರಿಕೆಗೆ ಕಾರಣವೆಂದು ಹೇಳಲಾಗಿದೆ.

ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಮತ್ತಷ್ಟು ಏರುಮುಖವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಪ್ರಸ್ತುತದ ದುಬಾರಿ ದಿನಗಳಲ್ಲಿ ದೈನಂದಿನ ಬಳಕೆಯ ಈರುಳ್ಳಿ ಬೆಲೆ ಗಗನ ಮುಟ್ಟಿರುವುದು ಜನಸಾಮಾನ್ಯರಿಗೆ ಸಂಕಷ್ಟ ತಂದೊಡ್ಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights