ಹೊರಗಿನಿಂದ ಬಂದವರ ಕ್ವಾರಂಟೈನ್ಗೆ ಸ್ಥಳೀಯರ ವಿರೋಧ: ಮುಗಿಯದ ಗೊಂದಲ
ಹೊರರಾಜ್ಯಗಳಿಂದ ಬೆಂಗಳೂರಿಗೆ ಬಂದವರನ್ನು ಕ್ವಾರಂಟೈನ್ ಮಾಡಲು ಸರ್ಕಾರವು ನಗರದ ವಿವಿಧ ಸ್ಥಳಗಳಲ್ಲಿ ವ್ಯವಸ್ಥೆ ಮಾಡುತ್ತಿದೆ. ಆದರೆ, ಹೊರಗಿನಿಂದ ಬಂದವರನ್ನು ಕ್ವಾರಂಟೈನ್ ಮಾಡಲು ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಲಾಕ್ಡೌನ್ ಸಡಿಲಗೊಂಡ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬಂದವರು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗಲೇಬೇಕು. ಅದಕ್ಕಾಗಿಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಹಿಂದುಳಿಗ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲು ಬಿಬಿಎಂಪಿ ಮುಂದಾಗಿದೆ.
ಆದರೆ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕ್ವಾರಂಟೈನ್ಗೆ ವ್ಯವಸ್ಥೆ ಕಲ್ಪಿಸಲು ಬಂದ ಅಧಿಕಾರಿಗಳನ್ನು ಸ್ಥಳೀಯ ನಿವಾಸಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಪ್ರದೇಶದಲ್ಲಿ ಯಾವುದೇ ಕೊರೊನಾ ಸೋಂಕು ಪ್ರಕರಣ ಕಂಡು ಬಂದಿರದ ಹಿನ್ನೆಲೆಯಲ್ಲಿ ಇಲ್ಲಿ ಕ್ವಾರಂಟೈನ್ ಮಾಡಬಾರದು ಎಂದು ಸ್ಥಳೀಯರು ವಾದಿಸುತ್ತಿದ್ದಾರೆ.
ಹೊರರಾಜ್ಯಗಳಿಂದ ಬಂದವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಕೋವಿಡ್-19 ರೋಗ ಲಕ್ಷಣಗಳು ಕೂಡಾ ಇಲ್ಲ. ಆದರೆ ಆರೋಗ್ಯ ಇಲಾಖೆಯ ನಿಯಮಾವಳಿಗಳ ಪ್ರಕಾರ ಹೊರ ರಾಜ್ಯದವರು ಬಂದಾಗ 14 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಗದ್ದಲ ಉಂಟು ಮಾಡಬಾರದು ಎಂದು ಪೊಲೀಸರು ಸ್ಥಳೀಯರಲ್ಲಿ ಮನವಿ ಮಾಡಿದರು.
ಕೊರೊನಾ ಸೋಂಕಿನ ಭಯದಲ್ಲಿರುವ ಸ್ಥಳೀಯರು ಹೊರ ರಾಜ್ಯಗಳಿಂದ ಬಂದವನ್ನು ತಮ್ಮ ನಿವಾಸದ ಬಳಿ ಇರಿಸಿಕೊಳ್ಳಲು ಸುತಾರಾಂ ಒಪ್ಪುವುದಿಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ.

