ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ : 8 ಜನ ಸಾವು – 5000ಕ್ಕೂ ಅಧಿಕ ಮಂದಿ ಅಸ್ವಸ್ಥ!

ಕೊರೊನಾ ವೈರಸ್ ನಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿರುವ ಸಂದರ್ಭದಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 8 ಜನ ಸಾವನ್ನಪ್ಪಿದ್ದಾರೆ.

ಹೌದು… ಇಂದು ಬೆಳಿಗ್ಗೆ ಸಂಭವಿಸಿದ ಈ ದುರ್ಘಟನೆಯಲ್ಲಿ  ಇಬ್ಬರು ಮಕ್ಕಳು ಸೇರಿದಂತೆ 8 ಜನ ಸಾವನ್ನಪ್ಪಿದ್ದು 5000ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ವರದಿಗಳ ಪ್ರಕಾರ, ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಗೋಪಾಲಪಟ್ಟಣಂ ಬಳಿ ಇರುವ ಆರ್.ಆರ್ ವೆಂಕಟಪುರಂ ನಲ್ಲಿನ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಇದರಿಂದ 3 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಇರುವ ಸ್ಥಳೀಯರು ಆತಂಕಗೊಂಡಿದ್ದಾರೆ. ವಿಷಾನಿಲ ಸೋರಿಕೆಯಾದ ಬೆನ್ನಲ್ಲೇ ರಸ್ತೆಯಲ್ಲೇ ಹಲವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಾರೆ. ಇದರಿಂದ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಸಾಕಷ್ಟು ಜನರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದಾರೆ. ಕೆಲವರಿಗೆ ಉಸಿರಾಟದ ಸಮಸ್ಯೆಯಾಗಿದ್ದರೆ, ಇನ್ನೂ ಕೆಲ ಜನರಿಗೆ ದೇಹದ ಮೇಲೆ ದದ್ದುಗಳು ಎದ್ದಿವೆ. ಸದ್ಯ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಅಲ್ಲಿರುವ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದ್ದಾರೆ.

ಘಟನೆ ನಡೆದ ಜಾಗಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಸಾಯನಿಕದಿಂದ ಮೈ, ಕಣ್ಣು ತುರಿಕೆ, ಉರಿಯಿಂದ ಪರದಾಡುತ್ತಿದ್ದವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ವಿಷಯ ತಿಳಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಕೂಡ ಸ್ಥಳಕ್ಕೆ ಧಾವಿಸುತ್ತಿದ್ದಾರೆ. ವಿಷಾನಿಲ ಸೋರಿಕೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights