ಸಿರಾ ಉಪಚುನಾವಣೆಗೆ ನಿಖಿಲ್ ಸ್ಪರ್ಧೆ? ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಸಿರಾ ಕ್ಷೇತ್ರದ ಜೆಡಿಎಸ್‌ ಶಾಸಕ ಬಿ ಸತ್ಯನಾರಾಯಣ ಅವರ ಸಾವಿನಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆಯಲ್ಲಿ ನಿಖಿಲ್  ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಜೆಡಿಎಸ್‌ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಖಿಲ್‌, ಉಪಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ನನಗಿಲ್ಲ, ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ರೀತಿಯ ಊಹಾಪೋಹದ ವದಂತಿಗಳನ್ನು ಜನರು ನಂಬಬಾರದು. ಇಂತಹ ವದಂತಿಗಳನ್ನು ಯಾರು ಹಬ್ಬಿಸುತ್ತಾರೋ? ಯಾಕೆ ಹಬ್ಬಿಸುತ್ತಾರೋ? ಇದರಿಂದ ಅಂತಹವರಿಗೆ ಆಗುವ ಲಾಭ ಏನೆಂಬುದು ನನಗೆ ತಿಳಿಯದಾಗಿದೆ ಎಂದು ನಿಖಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಸಚಿವರು ಹಾಗೂ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅಕಾಲಿಕ ನಿಧನರಾಗಿದ್ದರಿಂದ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಅನಿವಾರ್ಯವಾಗಿದೆ. ಹಾಗಂತ ಅಕಾಲಿಕವಾಗಿ ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲ.  2018 ರ ವಿಧಾನಸಭಾ ಚುನಾವಣೆ ವೇಳೆ ಮೂರು ದಿನಗಳ ಕಾಲ ಶಿರಾ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ನಿಜ. ಹಾಗೆಂದ ಮಾತ್ರಕ್ಕೆ ಅಲ್ಲಿ ಸ್ಪರ್ಧಿಸುತ್ತೇನೆ ಎಂಬುದು ಸರಿಯಲ್ಲ ಎಂದು ನಿಖಿಲ್‌ ಸ್ಪಷ್ಟಪಡಿಸಿದ್ದಾರೆ.

ನಾನು ಶಿರಾ ಉಪಚುನಾವಣೆಯ ಅಭ್ಯರ್ಥಿಯಾಗುವ ಕನಸು ಕಂಡವನಲ್ಲ. ಯಾವುದೇ ಕಾರಣಕ್ಕೂ ನಾನು ಶಿರಾದಲ್ಲಿ ಅಭ್ಯರ್ಥಿ ಆಗುವುದಿಲ್ಲ. ಉಪಚುನಾವಣೆಗೆ ಯೋಗ್ಯ, ಸಮರ್ಥ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಲಿದ್ದಾರೆ. ಅವರ ಪರವಾಗಿಯೂ ಟೊಂಕಕಟ್ಟಿ ನಿಂತು ಪ್ರಚಾರ ಮಾಡಲಿದ್ದೇನೆ. ಇದರಲ್ಲಿ ಯಾರಿಗೂ ಎಳ್ಳಷ್ಟು ಸಂಶಯ ಬೇಡ ಎಂದು ತಿಳಿಸಿದ್ದಾರೆ.

ಅರಿವುಂಟೆ? ತೊಳಗಿ ಬೆಳಗಿ ಪ್ರಜ್ವಲಿಸಿ ಉರಿವ ಬೆಳಗು ಕೆಡುವಲ್ಲಿ ಉಡುಗುತ್ತಿದ್ದೇನೆ ಎಂದು ನುಡಿಯಿತ್ತೆ? ಇಂತಿವ ಹಿಡಿವಲ್ಲಿ ಬಿಡುವಲ್ಲಿ ಮಿಕ್ಕಾದವ ಒಡಗೂಡುವಲ್ಲಿ ಅಡಿಯೇರಿ ಮತ್ತೆ ಪುನರಪಿ ಅಡಿ ಉಂಟೆ? ತೊಟ್ಟು ಬಿಟ್ಟ ಹಣ್ಣಿಂಗೆ ಮತ್ತಾ ಬುಡದಾಸೆಯೇಕೆ? ನಿಶ್ಚಯವೆಂಬುದು ನಷ್ಟವಾದಲ್ಲಿ ಕಾಮಧೂಮ ಧೂಳೇಶ್ವರನೆಂಬ ಲಕ್ಷವೇತಕ್ಕೆ?  ಎಂಬ ಮಾದಾರ ಧೂಳಯ್ಯ ಅವರ ವಚನವನ್ನು ನಿಖಿಲ್‌ ಕುಮಾರಸ್ವಾಮಿ ತಮ್ಮ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌-ಜೆಡಿಎಸ್‌ ಭದ್ರಕೋಟೆ ಭೇದಿಸಲು ಬಿಜೆಪಿ ಕಾರ್ಯತಂತ್ರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights