ಮಹದಾಯಿ ಯೋಜನೆ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ…
ಇಂದು ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಜುಲೈ 15ರಿಂದ ನಿರಂತರವಾಗಿ ಈ ಸಂಬಂಧ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿರುವ ನ್ಯಾಯಪೀಠ, ಈ ಸಂಬಂಧ ಮೂರು ರಾಜ್ಯಗಳಿಗು ದಾಖಲೆ ಸಲ್ಲಿಸುವಂತೆ ಸೂಚಿಸಿದೆ. ಅಲ್ಲದೇ ನ್ಯಾಯಾಧೀಕರಣದ ತೀರ್ಪನ್ನು ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಕಳೆದ ವರ್ಷವೇ ಮಹದಾಯಿ ನ್ಯಾಯಾಧೀಕರಣ ತೀರ್ಪು ನೀಡಿದ್ದರೂ ಈ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರಲಿಲ್ಲ. ಇದರಿಂದಾಗಿ ಕರ್ನಾಟಕ ಪಾಲಿನ ನೀರಿನ ಬಳಕೆಯಲ್ಲಿ ತೊಡಗುಂಟಾಗಿತ್ತು.
ಮಹದಾಯಿ ಯೋಜನೆಗೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರಗಳು ವಿರೋಧ ವ್ಯಕ್ತಪಡಿಸುತ್ತಿದ್ದವು. ಆದ್ದರಿಂದ, ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಲು ವಿಳಂಬ ಮಾಡುತ್ತಿತ್ತು. ಈ ಬಗ್ಗೆ ಹಲವಾರು ಪ್ರತಿಭಟನೆಗಳು ಕೂಡ ನಡೆದಿದ್ದವು. ಮಹದಾಯಿ ನ್ಯಾಯಾಧಿಕರಣದ ಆದೇಶ ಜಾರಿಗೆ ತರಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಈ ಕುರಿತು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ರೈತಸೇನಾ ಅಧ್ಯಕ್ಷ ವೀರೇಶ್ ಸೊಬರದಮಠ ಆಗ್ರಹಿಸಿದ್ದರು.
ಅಧಿಸೂಚನೆ ಹೊರಡಿಸಿದ ಹಿನ್ನೆಲೆ ಮೂರು ರಾಜ್ಯಗಳು ಸಮರ್ಥ ದಾಖಲೆ ಸಲ್ಲಿಸಲು ಸೂಚಿಸಲಾಗಿದ್ದು, ದಾಖಲೆ ಸಲ್ಲಿಕೆಯಾದ ಬಳಿಕ ನಿರಂತರ ವಿಚಾರಣೆ ನಡೆಸಲಾಗುವುದು ಎಂದು ಕೂಡ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇದಕ್ಕೆ ಗೋವಾ, ಮಹಾರಾಷ್ಟ್ರ ಸಹಮತ ಸೂಚಿಸಿದೆ.

