SSLC ಪರೀಕ್ಷೆ ಮಗಿದ ಮೇಲೆ ಶಾಲೆಗಳ ಪುನರಾರಂಭ; ಜುಲೈ 05ರ ನಂತರ ನಿರ್ಧಾರ!
ಶೈಕ್ಷಣಿಕ ವರ್ಷ ಜೂನ್ ತಿಂಗಳಿನಲ್ಲಿ ಆರಂಭವಾಗಬೇಕು. ಕೊರೊನಾ ಕಾರಣದಿಂದಾಗಿ ಈಗಾಗಲೇ ಜೂನ್ ಅಂತ್ಯಕ್ಕೆ ತಲುಪಿದ್ದು, ಶಾಲೆಗಳು ತೆರೆದಿಲ್ಲ. ಈಗಷ್ಟೇ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿವೆ. ಎಸ್ಎಸ್ಎಲ್ಸಿ ಪರೀಕ್ಷಾ ನಂತರ ಶಾಲೆಗಳು ಆರಂಭವಾಗುತ್ತವಾ ಎಂದು ಪ್ರಶ್ನೆಗಳು ಎದುರಾಗುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ 5ರ ನಂತರ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೊರೋನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಆಗಸ್ಟ್, ಸೆಪ್ಟೆಂಬರ್ ನಂತರವಷ್ಟೇ ಶಾಲೆ ಆರಂಭಿಸಿ ಎಂದು ಪೋಷಕರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ತಜ್ಞರು, ಪೋಷಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡಬೇಕಾಗಿದೆ ಎಂದಿದ್ದಾರೆ.
ಎಲ್ ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳಿರುವುದಿಲ್ಲ. ವಾರಕ್ಕೆ ಎರಡು ಬಾರಿ ಶಾಲೆಗಳ ಶಿಕ್ಷಕರು ಮಕ್ಕಳೊಂದಿಗೆ ದೂರವಾಣಿ ಮೂಲಕ ಸಂವಹನ ನಡೆಸುತ್ತಿರಬೇಕು ಎಂದು ಸೂಚಿಸಿದ್ದೇವೆ ಎಂದು ಹೇಳಿದ್ದಾರೆ.
1ನೇ ತರಗತಿಯಿಂದ 10ನೇ ತರಗತಿಯವರೆಗೆ ಯಾವ ರೀತಿ ಪಾಠಗಳನ್ನು ನಡೆಸಬೇಕು ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಮಾರ್ಗಸೂಚಿ ಆಧಾರದ ಮೇಲೆ ಮತ್ತು ಈ ಹಿಂದೆ ಕೈಗೊಂಡ ನಿರ್ಧಾರಗಳ ಮೇಲೆ ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ. ಸಮಿತಿ ತನ್ನ ಶಿಫಾರಸುಗಳನ್ನು ಸಲ್ಲಿಸಿದ ನಂತರ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

