ಕೊರೊನಾ ಚಿಕಿತ್ಸೆಗೆ ಖಾಸಗಿ ವೈದ್ಯಾಧಿಕಾರಿಗಳೊಂದಿಗೆ ಯಡಿಯೂರಪ್ಪ ಸಭೆ; ಮುಖ್ಯಾಂಶಗಳು
ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿದ್ದಾರೆ.
ಸಿಎಂ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿದ್ದು, ಕೆಲವು ನಿರ್ಧಾರಗಳನನ್ನು ಕೈಗೊಳ್ಳಾಗಿದೆ.
ಸಭೆಯಲ್ಲಿ ಚರ್ಚೆಯಾದ ಮುಖ್ಯಾಂಶಗಳು ಹೀಗೆವೆ..
- ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2200 ಹಾಸಿಗೆಗಳನ್ನು ಅಧಿಸೂಚನೆ ಹೊರಡಿಸಲಾಗಿದೆ.
- ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ.
- ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತು ಪಡಿಸಿ, ಇತರ ಎಲ್ಲಾ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ.
- ಸರ್ಕಾರಿ ಕಾಲೇಜುಗಳಲ್ಲಿ 2000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಮನವಿ ಮಾಡಿದರು.
- ವೈದ್ಯಕೀಯ ಕಾಲೇಜುಗಳು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್-19 ಚಿಕಿತ್ಸೆಗೆ ಸಹಕರಿಸುವ ಭರವಸೆ ನೀಡಿದರು. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
- ಕೋವಿಡ್-19 ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
- ಕೋವಿಡ್-19 ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್-19 ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.
- ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು. ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
- ಕೋವಿಡ್-19 ಕೇರ್ ಸೆಂಟರ್ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸುವಂತೆ ಮನವಿ ಮಾಡಿದರು.
ಇನ್ನು, ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

