ರಾಹುಲ್‌ಗಾಂಧಿಯೇ ಕಾಂಗ್ರೆಸ್‌ ಅಧ್ಯಕ್ಷರಾಗಬೇಕು: ರಾಜ್ಯ ಕಾಂಗ್ರೆಸ್‌ ನಾಯಕರ ಒತ್ತಾಯ!

ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಬದಲಾವಣೆ ಬಗೆಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಮಧ್ಯೆ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸೋನಿಯಾ ಗಾಂಧಿ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಹೊರಬೀಳುತ್ತಿರುವ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ ಒಳಗೊಂಡಂತೆ ರಾಜ್ಯ ಕಾಂಗ್ರೆಸ್‌ನ ನಾಯಕರು, ಗಾಂಧಿ ಕುಟುಂಬದವರೇ ಕಾಂಗ್ರೆಸ್​ ಅಧ್ಯಕ್ಷರಾಗಿ ಮುಂದುವರೆಯಬೇಕೆಂದು ರಾಜ್ಯ ಕಾಂಗ್ರೆಸ್​ ನಾಯಕರು ಒತ್ತಾಯಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂಬ ಒತ್ತಾಯವೂ ಕೇಳಿಬಂದಿದ್ದು, ಈಗಾಗಲೇ 23 ಕಾಂಗ್ರೆಸ್ ನಾಯಕರು ಪಕ್ಷದಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಇಂದು ಕಾಂಗ್ರೆಸ್​ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯೂ ನಡೆಸಲಾಗುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕರ ಅನುಭವಪೂರ್ಣ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ. ಇದು ಪಕ್ಷದ ಕೋಟ್ಯಂತರ ಕಾರ್ಯಕರ್ತರ ಆಶಯವೂ ಆಗಿದೆ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸೋನಿಯಾ ಗಾಂಧಿ ಅವರ ಘನ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಅವರೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷ ಮುನ್ನಡೆಸಬೇಕು ಎಂಬುದು ನನ್ನ ಮತ್ತು ಕೋಟ್ಯಂತರ ಕಾರ್ಯಕರ್ತರ ಅಭಿಲಾಷೆಯಾಗಿದೆ ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನೇ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದಾರೆ.

ಈ ಮಧ್ಯೆ,  #MyLeaderRahulGandhi ಎಂಬ ಟ್ವಿಟ್ಟರ್​ ಅಭಿಯಾನವೂ ಟ್ರೆಂಡ್‌ ಆಗುತ್ತಿದೆ.

ಕೆಲವು ದಿನಗಳ ಹಿಂದಷ್ಟೇ, ಪಕ್ಷದ ಅಧ್ಯಕ್ಷರಾಗಿ ಗಾಂಧಿ ಕುಟುಂಬವನ್ನು ಹೊರತು ಪಡಿಸಿ ಹೊರಗಿನವರು ಆಯ್ಕೆಯಾಗಬೇಕು ಎಂದು ರಾಹುಲ್‌ಗಾಂಧಿ ಹೇಳಿದ್ದರು. ಈ ಹೇಳಿಕೆಗೆ ಬೆಂಬಲ ನೀಡಿದ್ದ ಪ್ರಿಯಾಂಕಾ ಗಾಂಧಿ, ಗಾಂಧಿ ಕುಟುಂಬದವರು ಅಧ್ಯಕ್ಷರಾಗುವುದಿಲ್ಲ. ಈ ವಿಷಯದಲ್ಲಿ ನಾನು ರಾಹುಲ್ ಗಾಂಧಿ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸುತ್ತೇನೆ. ನಮ್ಮ ಕುಟುಂಬದ ಯಾರೊಬ್ಬರೂ ಕಾಂಗ್ರೆಸ್​ ಪಕ್ಷಕ್ಕೆ ಅಧ್ಯಕ್ಷರಾಗುವುದಿಲ್ಲ. ಕಾಂಗ್ರೆಸ್ ಪಕ್ಷ ತನ್ನದೇ ದಾರಿಯಲ್ಲಿ ಸಾಗಬೇಕು. ಅದಕ್ಕಾಗಿ ಗಾಂಧಿ ಕುಟುಂಬವನ್ನು ಹೊರತು ಪಡಿಸಿ ಉಳಿದವರು ಅಧ್ಯಕ್ಷರಾಗಬೇಕು ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದರು.

ಈ ಎಲ್ಲದರ ನಡುವೆಯೂ ರಾಜ್ಯದ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿಯವರೇ ಅಧ್ಯಕ್ಷರಾಗಬೇಕು ಎಂದು ಒತ್ತಾಯಿಸಿದ್ದು, ಇಂದು ನಡೆಯುತ್ತಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಎದುರು ನೋಡುತ್ತಿದ್ದಾರೆ.


ಇದನ್ನೂ ಓದಿ:  ಕಾಂಗ್ರೆಸ್‌ನಲ್ಲಿನ ಭಿನ್ನಾಭಿಪ್ರಾಯಕ್ಕೆ ಜನರು ಹಣ ನೀಡುತ್ತಿದ್ದಾರೆ – ವಸುಂಧರಾ ರಾಜೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights