ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ: ಹೆಚ್‌ಡಿಕೆ
ಬೆಳಗಾವಿಯ ಪೀರನವಾಡಿ ವೃತ್ತದಲ್ಲಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಡವಿದ್ದನ್ನು ವಿರೋಧಿಸಿ, ಅದೇ ಜಾಗದಲ್ಲಿ ಮತ್ತೆ ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ಮಾಡುವಂತೆ ನಿನ್ನೆ ಕನ್ನಡಿಗರು ಬೆಳಗಾವಿ ಚಲೋ ಹೋರಾಟ ನಡೆಸಿದ್ದರು. ಈ ಬೆನ್ನಲೇ ಮರಾಠೀ ಭಾಷಿಗರು ರಾಯಣ್ಣನ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧ ವ್ಯಕ್ತಪಡಿಸಿ ದಾಂಧಲೆ ನಡೆಸಿದ್ದು, ಅದನ್ನು ವಿರೋಧಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ, ರಾಯಣ್ಣನ ಪ್ರತಿಮೆ ಸ್ಥಾಪನೆಯ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್‌ಡಿಕೆ, ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ ಎಂದಿದ್ದಾರೆ.
“ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ಕನ್ನಡಿಗರೆಂದರೆ – ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್” ಎಂದು ಕಪ್ಪೆ ಆರಭಟ್ಟ ಶಾಸನದ ಸಾಲುಗಳನ್ನು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಜಮೀನ್ದಾರಿ ಪದ್ದತಿಯನ್ನು ಮರುಕಳಿಸುತ್ತಿದೆ ಭೂಸುಧಾರಣಾ ತಿದ್ದುಪಡಿ ಕಾಯ್ದೆ: ಮೋದಿಗೆ ಸಿದ್ದರಾಮಯ್ಯ ಪತ್ರ

