ಗರಿಗೆದರಿದ ಗ್ರಾಮ ಪಂಚಾಯ್ತಿ ಚುನಾವಣೆ: ಪೊಲೀಸ್‌ ಬಂದೋಬಸ್ತ್‌ಗೆ ಆಯೋಗ ಪತ್ರ!

ರಾಜ್ಯದಲ್ಲಿ 5,800 ಗ್ರಾಮ ಪಂಚಾಯ್ತಿಗಳ ಚುನಾವಣೆ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಹಾಗಾಗಿ ಚುನಾವಣೆಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವ ಉದ್ದೇಶಕ್ಕೆ ಅನುದಾನ ಬಿಡುಗಡೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಚುನಾವಣಾ ಆಯೋಗವು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದೆ.

ಈ ಕುರಿತು ಪತ್ರ ಬರೆದಿರುವ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಯವರು, ರಾಜ್ಯಾಧ್ಯಂತ 5800 ಗ್ರಾಮಪಂಚಾಯ್ತಿಗಳಿಗೆ ನಡೆಯಲಿರುವ ಚುನಾವಣೆಗೆ ಪೊಲೀಸ್‌ ಇಲಾಖೆಯ ಸಹಕಾರ ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ರಾಜ್ಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರ್ತಿಸಿಕೊಂಡು ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಯೋಗ ಹೇಳಿದೆ.

ಪೊಲೀಸ್ ಇಲಾಖೆಯ ವಾಹನ, ಸಿಬ್ಬಂದಿಗಳಿಗೆ ದಿನಭತ್ಯೆ ಮತ್ತು ಪ್ರಯಾಣ ಭತ್ಯೆ ಇತ್ಯಾದಿ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನದ ಬಿಡುಗಡೆ ಕುರಿತು ಪ್ರಸ್ತಾವನೆಯನ್ನು ನೇರವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರದಲ್ಲಿ ತಿಳಿಸಲಾಗಿದೆ.

ಸದ್ಯದಲ್ಲೇ ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ಘೋಷಿಸಲಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಚುನಾವಣಾ ಪ್ರಕ್ರಿಯೆ ಗರಿಗೆದರಿದೆ.


ಇದನ್ನೂ ಓದಿ: ಅಕ್ಟೋಬರ್ 28, ನವೆಂಬರ್ 3, 7 ರಂದು ಬಿಹಾರ ಚುನಾವಣೆ : ನವೆಂಬರ್ 10 ರಂದು ಫಲಿತಾಂಶ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights