ಕರ್ನಾಟಕ ಬಂದ್‌ಗೆ ಕಾಂಗ್ರೆಸ್‌ ಬೆಂಬಲ; ರೈತಪರ ಹೋರಾಟಕ್ಕೆ ಸಿದ್ದ: ಡಿಕೆಶಿ

ಕೇಂದ್ರದ ಕೃಷಿ ಮಸೂದೆ ಮತ್ತು ರಾಜ್ಯದ ಭೂಸುಧಾರಣಾ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ಕೊಟ್ಟಿರುವ ಸೋಮವಾರದ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ, ರೈತಪರವಾಗಿ ಹೋರಾಟಕ್ಕೆ ಇಳಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ರೈತರ ವಿಚಾರದಲ್ಲಿ ಸರ್ಕಾರದ ನೀತಿಗಳ ವಿರುದ್ದ ಹೋರಾಟದಲ್ಲಿ ಕಾಂಗ್ರೆಸ್‌ ಹಿಂದೆ ಸರಿಯುವುದಿಲ್ಲ. ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ರೈತರ ಹೋರಾಟಕ್ಕೆ ಕಾಂಗ್ರೆಸ್‌ ಪೂರ್ಣ ಪ್ರಮಾಣದ ಬೆಂಬಲ ನೀಡಲಿದೆ. ಸದನದಲ್ಲಿ ಸವಾಲು ಪ್ರತಿ ಸವಾಲುಗಳು ನೋಡಿದ್ದೇವೆ. ಮುಂದಿನ ನಡೆ ಬಗ್ಗೆ ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರೀಯ ಪಕ್ಷವಾಗಿರುವುದರಿಂದ ನಾವು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ, ದೇಶಾದ್ಯಂತ ರೈತರಿಗೆ ಬೆಂಬಲ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕಕ್ಕೆ ಬಂದಿಳಿದಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ್ ಅವರು, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ರೈತ ವಿರೋಧಿಯಾಗಿವೆ. ರೈತರ ಭೂಮಿ, ಬೆಳೆ, ಮಾರಾಟ ಎಲ್ಲೆಡೆ ರೈತರ ಕತ್ತು ಹಿಸುಕಲು ಸರ್ಕಾರಗಲೂ ಮುಂದಾಗಿವೆ ಎಂದು ಆರೋಪಿಸಿದ್ದಾರೆ.

ರೈತ ವಿರೋಧಿ ನೀತಿಗಳ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ರಾಹುಲ್‌ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಜೆಡಿಎಸ್‌ ಕೂಡ ಈಗಾಗಲೇ ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿಸಿದ್ದು, ರಾಜ್ಯದ ಎರಡೂ ವಿರೋಧ ಪಕ್ಷಗಳು ರೈತರ ಪರ ನಿಲ್ಲಲು ನಿರ್ಧರಿಸಿವೆ.


ಇದನ್ನೂ ಓದಿ: ಕೃಷಿ ಮಸೂದೆ  ಅಂಗೀಕಾರದಲ್ಲಿ ಸರ್ಕಾರದಿಂದ ನಿಯಮ ಉಲ್ಲಂಘನೆ! ವಿಡಿಯೋ ಬಹಿರಂಗ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights