ಬೆಂಬಲ ಬೆಲೆಯೊಂದಿಗೆ ಖರೀದಿ ಕೇಂದ್ರಗಳಲ್ಲಿ ರೈತರ ಬೆಳೆ ಖರೀದಿ: ಡಿಸಿಎಂ ಲಕ್ಷ್ಮಣ ಸವದಿ

ರಾಜ್ಯದ ಮಾರುಕಟ್ಟೆಗಳಲ್ಲಿ ಭತ್ತ, ರಾಗಿ, ಜೋಳ ಸೇರಿದಂತೆ ಎಲ್ಲಾ ಬೆಳೆಗಳ ಬೆಲೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಬರುವ ದೃಷ್ಠಿಯಿಂದ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದ್ದು, ಬೆಂಬಲ ಬೆಲೆ ನೀಡಿ ರೈತರ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಮಾರುಕಟ್ಟೆಗಳಲ್ಲಿ ಬೆಲೆ ಕುಸಿತ ಸಾಮಾನ್ಯ ಎಂದು ಒಪ್ಪಿಕೊಂಡರು. “ಇದೇ ಕಾರಣಕ್ಕಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ನೀಡಿ ರೈತರಿಂದ ಬೆಳೆಯನ್ನು ಖರೀದಿ ಮಾಡಲಾಗುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಮಹಾಪೂರ ಬಂದಿದೆ. ಅತಿವೃಷ್ಟಿಯಾಗಿ 25 ಜಿಲ್ಲೆಗಳಲ್ಲಿ ಬೆಳೆ ಹಾನಿ ಆಗಿದೆ. ಮನೆಗಳು ಬಿದ್ದುಹೋಗಿವೆ. ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ನೀರಿನಲ್ಲಿ ಮುಳುಗಡೆಯಾಗಿದೆ. ಭತ್ತ, ರಾಗಿ ಬೆಳೆಯು ನೀರಿನಲ್ಲಿ ಕೊಚ್ಚಿಹೋಗಿದ್ದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆದ್ದರಿಂದ ರೈತರಿಗೆ ಶಕ್ತಿ ತುಂಬಲು ಬೆಳೆಹಾನಿಗೊಳಗಾಗಿರುವ ರೈತರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಭತ್ತವನ್ನು ಬೆಳೆಯಲಾಗುತ್ತಿದೆ. ಈ ಬಾರಿ ಮಳೆ ಸುರಿದು ಬೆಳೆಯೆಲ್ಲವೂ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಸರ್ಕಾರ ಧಾವಿಸಲಿದೆ. ನವೆಂಬರ್ 1 ರಿಂದ ಬೆಳೆಹಾನಿ ಕುರಿತು ನೋಂದಣಿ ಮಾಡಿಕೊಳ್ಳಲಾಗುವುದು. ಡಿಸೆಂಬರ್ 1 ರಿಂದ ಖರೀದಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿದ 1835 ರೂ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶೇಂಗಾ, ಸೂರ್ಯಕಾಂತಿ, ಹೆಸರು ಮೊದಲಾದ ಬೆಳೆಗಳಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಆ ಕಾರಣಕ್ಕಾಗಿಯೇ ಈ ಬೆಳೆಗಳಿಗೆ ಬೆಂಬಲ ಬೆಲೆಯನ್ನೂ ನಿಗದಿಪಡಿಸಲಾಗಿದೆ. ಖರೀದಿ ಕೇಂದ್ರಗಳ ಮೂಲಕ ಖರೀದಿ ಮಾಡಿ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತೇವೆ ಎಂದರು.

ಮಹಾಮಳೆಗೆ ಮನೆಗಳನ್ನು ಕಳೆದುಕೊಂಡಂವರಿಗೆ 5 ಲಕ್ಷ ರೂಪಾಯಿ ನೀಡಿ ಮನೆ ಕಟ್ಟಿಸಿಕೊಡುವ ಕೆಲಸ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬಡವರು, ಹಿಂದುಳಿದವರು, ದೀನದಲಿತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಕೇಂದ್ರ ಸರ್ಕಾರವೂ ಕಳೆದ 6 ವರ್ಷಗಳಲ್ಲಿ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಎಲ್ಲಾ ವಿಷಯಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರವೂ ಸೇರಿದಂತೆ 4 ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಪ್ರತಿ 10 ಮಂದಿ ಮತದಾರರಿಗೆ ಒಬ್ಬರಂತೆ ಕಾರ್ಯಕರ್ತರನ್ನು ನೇಮಕ ಮಾಡಿದೆ. ಆ ಕಾರ್ಯಕರ್ತರು ಆ ಹತ್ತು ಮತದಾರರನ್ನು ನಿತ್ಯವು ಭೇಟಿ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮನಮುಟ್ಟುವಂತೆ ಹೇಳಿ ಬಿಜೆಪಿ ಅಭ್ಯರ್ಥಿಗಳಿಗೆ ಮತಚಲಾಯಿಸುವಂತೆ ಮನವೊಲಿಕೆ ಮಾಡುತ್ತಿದ್ದಾರೆ ಎಂದರು.

ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ವಿಧಾನ ಪರಿಷತ್ತಿನಲ್ಲಿ ನಮ್ಮ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ನಾಲ್ಕೂ ವಿಧಾನಪರಿಷತ್ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಹೆಚ್ಚು ಒತ್ತು ನೀಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಉಳಿದ ಅವಧಿಗೂ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆಯ ವಿಷಯ ಕೇವಲ ಊಹಾಪೋಹ. ಇನ್ನುಳಿದ ಎರಡೂವರೆ ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: ಕನ್ನಡಿಗರಿಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್‌ ಇದೆಯೇ? ನಳಿನ್‌ಗೆ ಸಿದ್ದರಾಮಯ್ಯ ಸವಾಲು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights