ಲವ್ ಜಿಹಾದ್ ಕಾನೂನಿನ ಹಿಂದೆ ಕೋಮುದ್ವೇಷದ ರಾಜಕೀಯ ದುರುದ್ದೇಶವಿದೆ: ಸಿದ್ದರಾಮಯ್ಯ
‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದಾರೆ.
ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದರು, ಲವ್ ಜಿಹಾದ್ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕುಡ ಧ್ವನಿಗೂಡಿಸಿದ್ದರು. ಇದಕ್ಕೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ’ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ..? ಎಂದು ಪ್ರಶ್ನಿಸಿದ್ದಾರೆ.
ವಿವಾಹಕ್ಕಾಗಿಯೇ ಮತಾಂತರವಾದರೇ ಅದು ಮಾನ್ಯವಲ್ಲ ಎಂಬ ಅಲಹಾಬಾದ್ ಕೋರ್ಟ್ ತೀರ್ಪನ್ನು ಅನುಕೂಲಕ್ಕೆ ತಕ್ಕಂತೆ ಬಳಸಲಾಗುತ್ತಿದೆ ಎಂದಿದ್ದಾರೆ.
’ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ’ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ರಾಜರಾಜೇಶ್ವರಿ ನಗರ ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ಸೋಲೊಪ್ಪಿಕೊಂಡ ಹೆಚ್ಡಿಕೆ…!

