ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಅಧಿಸೂಚನೆ ರದ್ದು: ಹೈಕೋರ್ಟ್‌ ಆದೇಶ

ಮೀಸಲಾತಿ ನಿಗದಿಪಡಿಸುವಾಗ ರೊಟೇಷನ್‌ ನಿಯಮ ಅನುಸರಿಸಿಲ್ಲ ಎಂಬ ಅರೋಪದಿಂದಾಗಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ಪಡಿಸಿ ಸರ್ಕಾರ ಅಕ್ಟೋಬರ್ 08 ರಂದು ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆಯಲ್ಲಿ ಮೀಸಲಾತಿ ನಿಗದಿ ಪಡಿಸುವಾಗ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಆದೇಶಿಸಿದೆ.

ಅ. 08ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದೆ.

ಮೀಸಲಾತಿ ಕಲ್ಪಿಸುವ ವೇಳೆ ರೊಟೇಷನ್ ಅನುಸರಿಸಲಾಗಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅ.15ರಂದು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಅಧಿಸೂಚನೆಗೆ ಹಾಗೂ ಅ.19ರಂದು ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲು ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತ್ತು. ಇಂದು ವಿಚಾರಣೆ ನಡೆಸಿರುವ ಹೈಕೋರ್ಟ್‌ ಅಧಿಸೂಚನೆಯನ್ನು ರದ್ದುಗೊಳಿಸಿ, ಹೊಸ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದೆ.


ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನ್‌ ಕಂಪನಿಯ ನಡುವೆ ತಿಕ್ಕಾಟ: ಟೊಯೋಟಾದವರ ಮಾಡುತ್ತಿರುವುದೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights