JDS-BJP ವಿಲೀನವೆಂಬ ವದಂತಿ: ಸ್ಪಷ್ಟನೆ ನೀಡಿದ ಕುಮಾರಸ್ವಾಮಿ!

ಇತ್ತೀಚೆಗಿನ ದಿನಗಳಲ್ಲಿ ಜೆಡಿಎಸ್‌ ಮತ್ತು ಬಿಜೆಪಿಯ ಸಖ್ಯ ಹೆಚ್ಚಾಗುತ್ತಿದೆ. ಜೆಡಿಎಸ್‌ ಪಕ್ಷವು ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ವದಂತಿ ರಾಜ್ಯದ್ಯಂತ ಹಬ್ಬಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, “ಜನರ ಗಟ್ಟಿ ಧ್ವನಿಯಾಗಿರುವ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಇತ್ತೀಚೆಗೆ ಕುಮಾರಸ್ವಾಮಿ ಅವರು ಹಲವು ಬಾರಿ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದರು. ವಿಧಾನ ಪರಿಷತ್‌ನಲ್ಲಿಯೂ ಬಿಜೆಪಿ ಸರ್ಕಾರ ಮಂಡಿಸಿದ ಭೂಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿಗಳಿಗೂ ಜೆಡಿಎಸ್‌ ಬೆಂಬಲ ನೀಡಿತ್ತು. ಅಲ್ಲದೆ, ಪರಿಷತ್‌ ಸಭಾಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲೂ ಕೂಡ ಬಿಜೆಪಿಗೆ ಜೆಡಿಎಸ್‌ ಸಾಥ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡುತ್ತಾರೆ ಎಂಬ ವದಂತಿ ಹಬ್ಬಿತ್ತು.

ಇದನ್ನೂ ಓದಿ: ವಿಸ್ಟ್ರಾನ್‌ ಕಂಪನಿ ಬಿಕ್ಕಟ್ಟು: ಕಾರ್ಮಿಕರಲ್ಲಿ ಕ್ಷಮೆ ಕೋರಿ, ಉಪಾಧ್ಯಕ್ಷನನ್ನು ವಜಾ ಮಾಡಿದ ಕಂಪನಿ

ಈ ಬಗ್ಗೆ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಹೀಗಿದೆ, “ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ”ಎಂದು ಹೇಳಿದ್ದಾರೆ.

“ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ” ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

“ರೈತರ ಸಾಲಮನ್ನಾ’, ‘ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್‌ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಬೀದಿಗಳಿದಿದ್ದಾರೆ: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights