236 ಶಿಕ್ಷಕರಿಗೆ ಕೊರೊನಾ ದೃಢ; ಸಂಕ್ರಾತಿ ನಂತರ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭ!

ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವ ಉದ್ದೇಶದಿಂದ ಶಾಲೆಗಳ ಆರಂಭಕ್ಕೂ ಮುನ್ನವೇ ಶಿಕ್ಷಕರಿಗೆ ಕೋವಿಡ್ ಟೆಸ್ಟ್‌ ಮಾಡಲಾಗಿದ್ದು, ವರದಿಗಳು ಬರುತ್ತಿವೆ. ಶುಕ್ರವಾರ 50 ಶಿಕ್ಷಕರು ಹಾಗೂ 20 ಸಿಬ್ಬಂದಿಗಳಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು 236 ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ತಗುಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ರಾಜ್ಯದ ಪದವಿ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸಂಕ್ರಾಂತಿ ಬಳಿಕ ಆಫ್‌ಲೈನ್‌ ತರಗತಿಗಳು ಪ್ರಾರಂಭವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಶುಕ್ರವಾರ ಸಭೆ ನಡೆಸಿದ ಅವರು, ‘ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ತರಗತಿಗಳ ಅಂತಿಮ ವರ್ಷದ ಮತ್ತು ಅಂತಿಮ ಸೆಮಿಸ್ಟರ್‌ನ ಆಫ್‌ಲೈನ್‌ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಆ ಯಶಸ್ಸಿನ ಆಧಾರದಲ್ಲಿ ಉಳಿದ ತರಗತಿಗಳನ್ನು ಶುರು ಮಾಡಲಾಗುವುದು. ಯುಜಿಸಿ ಮತ್ತು ಕೋವಿಡ್‌ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

ಯುಜಿಸಿ ನಿಯಮದಂತೆ ಮಾರ್ಚ್‌ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ, ಹಲವು ವಿಶ್ವವಿದ್ಯಾಲಯಗಳ ಕಾಲೇಜುಗಳಲ್ಲಿ ಪಠ್ಯಕ್ರಮಗಳು ಪೂರ್ಣಗೊಂಡಿರದ ಕಾರಣ, ಏಪ್ರಿಲ್ ಅಥವಾ ಮೇನಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

‘ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲಾಗುವುದು ಎಂದು ಈಗಾಗಲೇ ಘೋಷಿಸಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು’ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಖುರ್ಚಿಗಾಗಿ ವಿದ್ಯಾರ್ಥಿಗಳ ಮಧ್ಯೆ ಜಗಳ : ಶಾಲೆಯಲ್ಲಿ ಸಹಪಾಠಿಯನ್ನೇ ಗುಂಡಿಟ್ಟು ಕೊಂದ SSLC ವಿದ್ಯಾರ್ಥಿ….!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.