ಮಹಾರಾಷ್ಟ್ರ ಮೈತ್ರಿ ಸರ್ಕಾರ ಬಿಕ್ಕಟ್ಟು: ಸೋನಿಯಾಗಾಂಧಿ ಅವರನ್ನು ಭೇಟಿಯಾದ NCP ನಾಯಕಿ!

ಮಹಾರಾಷ್ಟ್ರದ ಗೃಹ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಎದುರಾಗಿರುವ ಪ್ರಕ್ಷುಬ್ಧತೆಯ ನಡುವೆ ಎನ್‌ಸಿಪಿ ನಾಯಕಿ ಸುಪ್ರಿಯಾ ಸುಲೇ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ಎದುರಾಗಿರುವ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರ ಮೂರು ಪಕ್ಷಗಳ ನಡುವೆ ಸಮನ್ವಯ ಸಾಧಿಸುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ಹೇಳಲಾಗಿದೆ. ಭೇಟಿಯ ನಂತರ ಟ್ವೀಟ್‌ ಮಾಡಿರುವ ಸುಪ್ರಿಯಾ ಸುಲೇ, ನಿಮ್ಮ ಅಮೂಲ್ಯವಾದ ಮಾರ್ಗದರ್ಶನಕ್ಕಾಗಿ ತಮಗೆ ತುಂಬಾ ಧನ್ಯವಾದಗಳು ಸೋನಿಯಾ ಗಾಂಧಿ ಜಿ. ನಿಮ್ಮೊಂದಿಗೆ ಮಾತುಕತೆ ನಡೆಸುವುದು ಯಾವಾಗಲೂ ಸಂತೋ‍ಷ ತರುತ್ತದೆ ಎಂದು ಪೋಸ್ಟ್‌ ಮಾಡಿದ್ದಾರೆ.

ಈ ನಡುವೆ ರಾಜ್ಯದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲು ಬಿಜೆಪಿ ಒತ್ತಾಯಿಸುತ್ತಿದೆ.

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾರಾಷ್ಟ್ರದ ಮಹಾವಿಕಾಸ್ ಅಗಾಹ್ದಿ ಸರ್ಕಾರವು ಪ್ರತಿ ತಿಂಗಳು ₹ 100 ಕೋಟಿ ಸಂಗ್ರಹಿಸಲು ಪೊಲೀಸರಿಗೆ ಗುರಿ ನೀಡಿದೆ ಎಂದು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಆರೋಪಿಸಿದ ನಂತರ ಸಭೆ ಮಹತ್ವವನ್ನು ಪಡೆದುಕೊಂಡಿದೆ. .

ಬುಧವಾರ, ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಬಿಜೆಪಿಯ ದೇವೇಂದ್ರ ಫಡ್ನವೀಸ್ ನೇತೃತ್ವದ ನಿಯೋಗವು ರಾಜ್ಯಪಾಲ ಭಗತ್ ಸಿಂಗ್ ಕೊಶಾರಿ ಅವರನ್ನು ಭೇಟಿ ಮಾಡಿ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿಯಿಂದ “ಸ್ಥಿತಿ ವರದಿ” ಪಡೆಯುವಂತೆ ಒತ್ತಾಯಿಸಿದೆ.

ಕಳೆದ ಕೆಲವು ದಿನಗಳಿಂದ “ಹಲವಾರು ಹಗರಣಗಳು” ಬೆಳಕಿಗೆ ಬಂದರೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವಾದ್ದರಿಂದ ಬಿಜೆಪಿ ನಾಯಕರು ರಾಜ್ಯ ಸರ್ಕಾರದಿಂದ ವಿವರವಾದ ವರದಿಯನ್ನು ಪಡೆಯುವಂತೆ ರಾಜ್ಯಪಾಲರನ್ನು ಕೋರಿದ್ದಾರೆ ಎಂದು ಫಡ್ನವೀಸ್ ಹೇಳಿದ್ದಾರೆ.

ಪೊಲೀಸ್ ವರ್ಗಾವಣೆಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.

ಸುಪ್ರಿಯಾ ಸುಲೇ ಅವರ ತಂದೆ ಮತ್ತು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ರಾಜ್ಯದ ಎಂವಿಎ ಸರ್ಕಾರದ ಸಮನ್ವಯಕಾರ ಎಂದು ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸುಪ್ರಿಯಾ ಸುಲೇ ಅವರು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಸಭೆ ನಡೆಸಿರುವುದು ರಾಜ್ಯದ ಮೈತ್ರಿ ಸರ್ಕಾರದಲ್ಲಿ ಮೂರು ಪಕ್ಷಗಳ ನಡುವೆ ಉತ್ತಮ ಸಮನ್ವಯವನ್ನು ಸಾಧಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 100 ಕೋಟಿ ರೂ ಲಂಚ ಆರೋಪ; ಮಹಾರಾಷ್ಟ್ರ ಗೃಹ ಸಚಿವ ರಾಜೀನಾಮೆ ನೀಡಲ್ಲ ಎಂದ NCP

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights