ಕೊರೊನಾ ಆಕ್ರಮಣ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಪೋಸ್ಟ್‌ಪೋನ್‌!

ಕೊರೊನಾ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಭಾನುವಾರ ಸುತ್ತೊಲೆ ಹೊರಡಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ 28-04-2021 ರಿಂದ ದಿನಾಂಕ 18-05-2021 ರವರೆಗೆ ನಡೆಸಲು ತೀರ್ಮಾನಿಸಿತ್ತು.

ಇಲಾಖೆಯು ಪ್ರಾಯೋಗಿಕ ಪರೀಕ್ಷೆಯನ್ನು ಆಯಾ ಕಾಲೇಜುಗಳ ಹಂತದಲ್ಲಿಯೇ ನಡೆಸಲು ಈ ಹಿಂದೆ ಸೂಚಿಸಿತ್ತು. ಆದರೆ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಬೇಕೆಂದು ಪೋಷಕರು, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಇಲಾಖೆಗೆ ಮನವಿಗಳು ನೀಡಿದ್ದರು.

ಸಲ್ಲಿಕೆಯಾದ ಮನವಿಗಳ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲು ಇಲಾಖೆಯು ತೀರ್ಮಾನಿಸಿದೆ.

ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್‌‌, “ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕು” ಎಂದಿದ್ದಾರೆ.

Read Also: ರಾಜಕೀಯವನ್ನು ಬದಿಗೊತ್ತಿ, ಸಾರ್ವಜನಿಕರಿಗೆ ಸಹಾಯ ಮಾಡಿ: ಕಾಂಗ್ರೆಸ್‌ ಕಾರ್ಯಕರ್ತರಿಗೆ ರಾಹುಲ್‌ ಗಾಂಧಿ ಕರೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights