BJP ಸರ್ಕಾರ ಜಿಂದಾಲ್‌ ಮುಂದೆ ಮಂಡಿಯೂರಲು ಕಾರಣವಿದೆ; ಅದನ್ನು BSY ಬರಿರಂಗಪಡಿಸಲಿ: ಹೆಚ್‌ಡಿಕೆ

ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್‌ ಸಂಸ್ಥೆಗೆ 3,667 ಎಕರೆ ಜಮೀನನ್ನು ಮಾರಾಟ ಮಾಡಲು ನಿರ್ಧರಿಸಿದೆ. ಈ ಹಿಂದೆ ಮೈತ್ರಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದ ಬಿಜೆಪಿ ಇದೀಗ ಸ್ವತಃ ತಾನೇ ಜಮೀನು ನೀಡಲು ಮುಂದಾಗಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್‌ಡಿಕೆ, ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಹೇಳಿದ್ದಾರೆ.

‘ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ…’ ಜಿಂದಾಲ್‌ಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಆರೋಪಿಸಿದ್ದಾರೆ.

ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿಯ ‘ಸಂಸ್ಕೃತಿ’. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ? ಎಂದು ಪ್ರಶ್ನಿಸಿದ್ದಾರೆ.

ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ಅನ್ನು’ಈಸ್ಟ್‌ ಇಂಡಿಯಾ ಕಂಪನಿ’ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ? ಎಂದು ವ್ಯಂಗ್ಯವಾಡಿದ್ದಾರೆ.

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ? ಎಂದು ಹೆಚ್‌ಡಿಕೆ ಕೇಳಿದ್ದಾರೆ.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಕ್ಯಾಲಿಫೋರ್ನಿಯಾದಿಂದ ಭಾರತಕ್ಕೆ ಆಕ್ಸಿಜನ್‌ ನೆರವು: ಮಂಗಳವಾರ ಆಕ್ಸಿಜನ್‌ ರವಾನೆ!

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights