ಅಧಿಕಾರವೇ ಇಲ್ಲದೇ ಸಿಎಂ ಸ್ಥಾನಕ್ಕೆ ಕಚ್ಚಾಟ; ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಬುಲಾವ್?!
ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರವಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳು ಬಾರಿ ಇವೆ. ಇಂತಹ ಸಂದರ್ಭದಲ್ಲಿಯೂ ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಯಾರು ಎಂದು ಕಿತ್ತಾಟ ನಡೆಯುತ್ತಿದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಬರುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ ಎಂದು ತಿಳಿದು ಬಂದಿದೆ.
ಕಳೆದ ಎರಡು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದೆಹಲಿ ತೆರಳಿ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಹೇಳಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ರಾಜ್ಯದಲ್ಲಿ ಡಿಕೆಶಿ ಬೆಂಬಲಿಗರು ಮತ್ತು ಸಿದ್ದರಾಮಯ್ಯ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ತಮ್ಮ ನಾಯಕರೇ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯಗಳನ್ನು ಸೂಚಿಸಿವೆ. ಹೀಗಾಗಿ ಇದು ಹೈಕಮಾಂಡ್‌ಗೆ ಚುನಾವಣೆಗೂ ಮುನ್ನವೇ ತಲೆ ನೋವಾಗಿದೆ. ಹೀಗಾಗಿ, ಮುಂದಿನ ಮುಖ್ಯಮಂತ್ರಿ ಕುರಿತು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯ ಎಂಬ ಸಂದೇಶ ರವಾನೆ ಮಾಡಿದೆ ಎನ್ನಲಾಗಿದೆ.
ಇದನ್ನೂ ಓದಿ: ಕುರ್ಚಿ ಉಳಿಸಿಕೊಳ್ಳಲು ಮೋದಿ ಓಲೈಕೆಗಿಳಿದ ಬಿಎಸ್‌ವೈ; ಹರಿಯಿತು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ಹಣ: ಎಎಪಿ ಆರೋಪ
ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಮುಂದಿನ ಮುಖ್ಯಮಂತ್ರಿ ಕುರಿತು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕರಾದ ಭೀಮಾನಾಯ್ಕ, ಕಂಪ್ಲಿ ಗಣೇಶ್ ಸೇರಿದಂತೆ ಅನೇಕರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.
ಅಲ್ಲದೆ, ಕೆಲವು ಕಾಂಗ್ರೆಸ್ ನಾಯಕರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.
ಕೊರೊನಾದಂತಹ ಗಂಭೀರ ವಿಷಯಗಳಲ್ಲಿ ಜನ ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ವೈಫಲ್ಯಗಳ ಬಗ್ಗೆ ಪ್ರಶ್ನೆ ಮಾಡುವುದನ್ನು ಬಿಟ್ಟು ಕಾಂಗ್ರಸ್ ಶಾಸಕರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ.
ಇತರ ಪಕ್ಷಗಳಿಂದ ಕಾಂಗ್ರೆಸ್ ವಲಸೆ ಬಂದವರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅಲ್ಲದೆ, ಇವರೆಲ್ಲರೂ ಸಿದ್ದರಾಮಯ್ಯ ಅವರ ಹಿಂದೆಯೇ ಸುತ್ತುತ್ತಿದ್ದಾರೆ. ಅವರ ಹೇಳಿಕೆಗಳು ಪಕ್ಷಕ್ಕೆ ಮುಜುಗರವನ್ನು ಉಂಟುಮಾಡುತ್ತಿವೆ ಎಂದು ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮುಂದೆ ದೂರಿದ್ದಾರೆ ಎಂದು ಹೇಳಲಾಗಿದೆ.
ಹೀಗಾಗಿ, ಸಿದ್ದರಾಮಯ್ಯ ಅವರನ್ನು ಮುಂದಿನ ತಿಂಗಳು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುವುದಾಗಿ ಹೈಕಮಾಂಡ್ ಭರವಸೆ ನೀಡಿದ್ದಾರೆ. ಶೀಘ್ರವೇ ಶಾಸಕಾಂಗ ಸಭೆ ಕರೆದು ಗೊಂದಲಗಳಿಗೆ ತೆರೆ ಎಳಿಯುವಂತೆ ಸೂಚಿಸುವುದಾಗಿಯೂ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕಾಂಗ್ರೆಸ್ ಹೊರಗಿಟ್ಟು NCP ನೇತೃತ್ವದಲ್ಲಿ 8 ಪಕ್ಷಗಳ ಸಭೆ; ಸಜ್ಜಾಗುತ್ತಿದೆಯೇ ತೃತೀಯ ರಂಗ!