ಮುಂದಿನ ಚುನಾವಣೆಗಳನ್ನು ಎದುರಿಸಲು ಸಿದ್ಧರಾಗಿ: ಪಕ್ಷದ ಮುಖಂಡರಿಗೆ ಯಡಿಯೂರಪ್ಪ ಕರೆ!
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯಕ್ಕೆ ಎದುರಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು ಸಿದ್ದರಾಗಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಸಿಎಂ ಯಡಿಯೂರಪ್ಪ ಕರೆ ನೀಡಿದ್ದಾರೆ.
ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಬರಲಿರುವ ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ನಾವು ಸನ್ನದ್ದರಾಗಬೇಕು. ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೇ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಕೋವಿಡ್ ನಿಂದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಆದರೂ ಸರ್ಕಾರದಿಂದ ಆರ್ಥಿಕ ಸಂಕಷ್ಟಕ್ಕೊಳಗಾದವರಿಗೆ ವಿಶೇಷ ಪರಿಹಾರ, ಕೋವಿಡ್ ನಿಂದ ಮೃತಪಟ್ಟವರಿಗೆ ಒಂದು ಲಕ್ಷ ಪರಿಹಾರ, ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಬಾಲಸೇವೆ ಯೋಜನೆ ತಂದಿದ್ದೇವೆ. ಕೇಂದ್ರದ ಸಹಕಾರದೊಂದಿಗೆ ಸರ್ಕಾರ ಕೋವಿಡ್ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದೆ ಎಂದರು.
ಹಂತ ಹಂತವಾಗಿ ಅನ್ ಲಾಕ್ ಮಾಡುವ ಮೂಲಕ ಜನ ಸಾಮಾನ್ಯರ ಜೀವನಕ್ಕೆ ಅವಕಾಶ ಮಾಡಿಕೊಡಲಾಗಿದೆ. ರಾಜ್ಯದಲ್ಲಿ ಲಸಿಕಾ ಉತ್ಸವ ಕೂಡ ಯಶಸ್ವಿಯಾಗಿದೆ. ಇದು ಕೂಡ ಒಂದು ಐತಿಹಾಸಿಕ ದಾಖಲೆಯಾಗಿದೆ. ಲಸಿಕೆಯಲ್ಲಿ ರಾಜ್ಯವೂ ರಾಷ್ಟ್ರದಲ್ಲಿ ಎರಡನೇ ಸ್ಥಾನದಲ್ಲಿರುವುದು ಸಂತೋಷದ ಸಂಗತಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖಂಡರು ಭಾಗವಹಿಸಿದ್ದರು. ದೆಹಲಿಯಿಂದ ವರ್ಚುವಲ್ ಮೂಲಕ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಿದ್ದರು.
ಇದನ್ನೂ ಓದಿ: ಟ್ವಿಟರ್‌ನಲ್ಲಿ ಅವಹೇಳನ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ದ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್!