ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಿರು ಪರಿಚಯ…!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ರಾಜಭವನದಲ್ಲಿಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 28,1960 ರಂದು ಹುಬ್ಬಳ್ಳಿಯಲ್ಲಿ ಜನಿಸಿದರು. ಇವರ ತಂದೆ ಎಸ್.ಆರ್.ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ ಹಾಗೂ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ತಾಯಿ ಗಂಗಮ್ಮ ಎಸ್. ಬೊಮ್ಮಾಯಿ, ಧರ್ಮಪತ್ನಿ ಚನ್ನಮ್ಮಾ ಬಿ. ಬೊಮ್ಮಾಯಿ, ಪುತ್ರ ಭರತ, ಪುತ್ರಿ ಆದಿತಿ ಎಂಬ ಇಬ್ಬರು ಮಕ್ಕಳಿದ್ದಾರೆ.

ವಿದ್ಯಾಭ್ಯಾಸ :

ಇನ್ನೂ ಹುಬ್ಬಳ್ಳಿಯ ದೇಶಪಾಂಡೆ ನಗರದ ರೋಟರಿ ಇಂಗ್ಲೀಷ ಮಾದ್ಯಮ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಮಾಧ್ಯಮಿಕ ವಿದ್ಯಾಭ್ಯಾಸ ಮುಗಿಸಿದ ಅವರು, ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ಮುಗಿಸಿದರು. ಬಿ.ವ್ಹಿ.ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜನೀಯರಿಂಗ್ ವಿದ್ಯಾಭ್ಯಾಸ (ಮೆಕ್ಯಾನಿಕಲ್) ಪೂರ್ಣಗೊಳಿಸಿದರು.

ಆರಂಭದಲ್ಲಿ ಕೈಗಾರಿಕಾ ಉದ್ಯಮಿಯಾಗಿದ್ದ ಬೊಮ್ಮಾಯಿ ಅವರು 1983 ರಿಂದ 1985 ರವರೆಗೆ ಪುಣೆ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷಗಳ ತಾಂತ್ರಿಕ ತರಬೇತಿ ಪಡೆದರು. ಹುಬ್ಬಳ್ಳಿ ಹಾಗೂ ಬೆಂಗಳೂರಿನಲ್ಲಿ ಉದ್ಯೋಗ ಸ್ಥಾಪನೆ ಮಾಡಿದರು.

ಸಾಮಾಜಿಕ ಹಾಗೂ ರಾಜಕೀಯ ಸೇವೆ :

ಕಾಲೇಜ್ ವಿದ್ಯಾಭ್ಯಾಸ ದಿನದಿಂದಲೇ ಸಾಮಾಜಿಕ ಹಾಗೂ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಬೊಮ್ಮಾಯಿ ಸಂಘಟನೆಗಳಿಗೆ ಸತತ ಪ್ರಯತ್ನ ಮಾಡುತ್ತಿದ್ದರು.

2007 ರಲ್ಲಿ ಜುಲೈನಲ್ಲಿ ಧಾರವಾಡದಿಂದ ನರಗುಂದವರೆಗೆ 232 ಕಿ.ಮೀ 21 ದಿನಗಳ ಬೃಹತ್ ರೈತರೊಂದಿಗೆ ಪಾದಯಾತ್ರೆ ಕೈಗೊಂಡಿದ್ದರು. 1993 ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ರಾಜ್ಯ ಯುವಜನತಾ ದಳದ ಐತಿಹಾಸಿಕ ಬೃಹತ್ ರ್ಯಾಲಿಯ ಸಂಘಟನೆಯ ನೇತೃತ್ವ ವಹಿಸಿದ ಅವರು 1995 ರಲ್ಲಿ ಹುಬ್ಬಳ್ಳಿ ನಗರದ ಈದಗಾ ಮೈದಾನದ ಸಮಸ್ಯೆಯ ಶಾಸ್ವತ ಪರಿಹಾರಕ್ಕೆ ರಾಜ್ಯ ಸರ್ಕಾರದ ಮೂಲಕ ಪ್ರಯತ್ನ  ಜೊತೆಗೆ ನೇತೃತ್ವ ವಹಿಸಿದ್ದರು.

ಪಕ್ಷದಲ್ಲಿ ಸ್ಥಾನ :

1995 ರಲ್ಲಿ ರಾಜ್ಯದ ಜನತಾದಳ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ರಾಜಕೀಯ ಸ್ಥಾನಮಾನ :

1996 ರಿಂದ 1997 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲ್ ಇವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡು, 31-12-1997 ಹಾಗೂ 04-12-2003 ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ-ಹಾವೇರಿ-ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾದರು.

22-05-2008 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭೆ ಮತಕ್ಷೇತ್ರದಿಂದ ಆಯ್ಕೆಯಾದರು.

ರಾಜ್ಯದ ಹಿಂದಿನ ಬಿ.ಜೆ.ಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ / ಡಿ.ವ್ಹಿ.ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್ ಇವರ ಸಚಿವ ಸಂಪುಟದಲ್ಲಿ ಸತತ ಐದು ವರ್ಷಗಳವರೆಗೆ ಜಲ ಸಂಪನ್ಮೂಲ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 05-05-2013 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭಾ ಮತಕ್ಷೇತ್ರದಿಂದ ದ್ವಿತೀಯ ಭಾರಿಗೆ ಆಯ್ಕೆಯಾದರು. 12-05-2018 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭಾ ಮತಕ್ಷೇತ್ರದಿಂದ ತೃತೀಯ ಭಾರಿಗೆ ಆಯ್ಕೆಯಾಗಿ ಬಿ.ಎಸ್.ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗಿ ಸೇವೆ ಸಲ್ಲಿಸಿ, ಸದ್ಯ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights