ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ಪ್ರಕರಣ : ಕೇಂದ್ರ ಸಚಿವ ನಾರಾಯಣ ರಾಣೆಗೆ ಜಾಮೀನು!

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ಜಾಮೀನು ನೀಡಲಾಗಿದೆ.

ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ಜಾಮೀನು ಸಿಕ್ಕಿದೆ. ಜುಲೈನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವರಾಗಿ ಸೇರ್ಪಡೆಯಾದ ಬಿಜೆಪಿ ನಾಯಕರಾದ ರಾಣೆ, 20 ವರ್ಷಗಳಲ್ಲಿ ಬಂಧನಕ್ಕೊಳಗಾದ ಮೊದಲ ಕೇಂದ್ರ ಸಚಿವರಾಗಿದ್ದಾರೆ.

ಕೇಂದ್ರ ಸಚಿವರ ವಕೀಲರು ಮಾತನಾಡಿ, ರಾಣೆ ಅವರು ಆಗಸ್ಟ್ 31 ಮತ್ತು ಸೆಪ್ಟೆಂಬರ್ 13 ರಂದು ಪೊಲೀಸರ ಮುಂದೆ ಹಾಜರಾಗಬೇಕಾಗುತ್ತದೆ ಎಂದು ಹೇಳಿದರು. ಪೊಲೀಸ್ ತನಿಖೆಗೆ ಅವರ ಧ್ವನಿ ಮಾದರಿ ಅಗತ್ಯವಿದ್ದರೆ, ಏಳು ದಿನಗಳ ಮುಂಚಿತವಾಗಿ ನೋಟಿಸ್ ನೀಡಲಾಗುವುದು. ಭವಿಷ್ಯದಲ್ಲಿ ಅಂತಹ ಕೆಲಸ ಮಾಡದಂತೆ ಅವರಿಗೆ ಹೇಳಲಾಗಿದೆ ಎಂದು ವಕೀಲರು ಹೇಳಿದರು.

ಸಚಿವ ನಾರಾಯಣ ರಾಣೆ ಹೇಳಿದ್ದೇನು..?

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು. ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ಹೇಳಿಕೆ ನೀಡಿದ್ದರು. ಈ ಮಧ್ಯೆ ರಾಣೆ ಅವರು ಸಿಎಂ ವಿರುದ್ಧದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾವು ಸಿಎಂ ವಿರುದ್ಧ ಹೇಳಿಕೆ ನೀಡುವ ಮೂಲಕ ಯಾವುದೇ ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ. ರಾಣೆ ಹೇಳಿಕೆಗೆ ಶಿವಸೇನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವರನ್ನು ಬಂಧಿಸಬೇಕು ಎಂದು ಒತ್ತಾಯಿಸಿತ್ತು.

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights