32 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ : ಕಾಲೇಜು ವಿರುದ್ಧ ಆರೋಗ್ಯ ಸಚಿವರು ಗರಂ..!

ರಾಜ್ಯದ ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ರಾಜ್ಯದಲ್ಲಿ 32 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಒಕ್ಕರಿಸಿರುವುದು ವರದಿಯಾಗಿದೆ. ಇದರಿಂದಾಗಿ ಕಾಲೇಜು ವಿರುದ್ಧ ಆರೋಗ್ಯ ಸಚಿವ ಕೆ ಸುಧಾಕರ್ ಗರಂ ಆಗಿದ್ದಾರೆ.

ನಿನ್ನೆಯಷ್ಟೇ ಕೇರಳದಿಂದ ಬರುವವರ ಮೇಲೆ ನಿಗಾ ಇಡುವಂತೆ ಉನ್ನತಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಒಂದು ವಾರ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿತ್ತು. ಈ ಆದೇಶದ ಬೆನ್ನಲ್ಲೇ ಕೆಜಿಎಫ್‌ನ ನರ್ಸಿಂಗ್ ಕಾಲೇಜಿನಲ್ಲಿ 32 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ಒಕ್ಕರಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಇನ್ನೂ ಸೋಂಕಿತರ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ ಮಾಡಲಾಗಿದ್ದು, 375 ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ತಾಲೂಕಿನ ಕುಪ್ಪಳ್ಳಿಯಲ್ಲಿ ಮಾತನಾಡಿದ ಡಾ. ಕೆ ಸುಧಾಕರ್,” ಕೆಜಿಎಫ್‌ನ ನರ್ಸಿಂಗ್ ಕಾಲೇಜಿನಲ್ಲಿ 32 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ನಾಳೆ ಕಾಲೇಜಿಗೆ ಭೇಟಿ ಡುತ್ತಿದ್ದೇನೆ. ಆ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಕೇರಳದಿಂದ ಬರುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಆದರೂ ಈ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಹೇಗೆ ಸೇರಿಸಿಕೊಳ್ಳಲಾಯಿತೋ ಗೊತ್ತಿಲ್ಲ. ಈಗಾಗಲೇ ದೇಶದಲ್ಲೇ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆ ಕೇರಳದಲ್ಲಿ ಪತ್ತೆಯಾಗುತ್ತಿವೆ. ಇದು ತಿಳಿದೂ ಇಂತಹ ನಿರ್ಲಕ್ಷ್ಯ ತೋರಲಾಗಿದೆ. ಕಾಲೇಜಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಮೂಲಗಳ ಪ್ರಕಾರ ವಿದ್ಯಾರ್ಥಿಗಳು ಕೇರಳದಿಂದ ಬಂದಿದ್ದರು. ತಹಶೀಲ್ದಾರ್ ಮತ್ತು ಆರೋಗ್ಯ ಅಧಿಕಾರಿಗಳಿಗೆ ಅವರ ಆಗಮನ, ಆರ್‌ಟಿ-ಪಿಸಿಆರ್ ವರದಿಗಳು ಮತ್ತು ಇತರ ವಿವರಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ ತಕ್ಷಣವೇ ಸಲ್ಲಿಸಲು ಸೂಚನೆಗಳನ್ನು ನೀಡಲಾಗಿದೆ. ಪ್ರಸ್ತುತ ಈ ಸೋಂಕಿತ 15 ವಿದ್ಯಾರ್ಥಿಗಳನ್ನು ಬಿಜಿಎಂಎಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಉಳಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಲ್ಲಿ ಪ್ರತ್ಯೇಕಿಸಲಾಗಿದೆ. ಅವರ ಸ್ವ್ಯಾಬ್‌ಗಳನ್ನು ಕೂಡ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಕಣ್ಗಾವಲು ಅಧಿಕಾರಿ ಡಾ ಚಂದನ್  ತಿಳಿಸಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights