ನೆರೆ ರಾಜ್ಯಗಳಲ್ಲಿ ಕೊರೊನಾ ಉಲ್ಬಣ – ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ!

ನೆರೆ ರಾಜ್ಯ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿಲು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 5 ಗಡಿ ಜಿಲ್ಲೆಗಳ ಕೋವಿಡ್ 19 ಸ್ಥಿತಿಗತಿ ಕುರಿತು ವಿಡಿಯೊ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದುಕೊಂಡು, ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜಿಲ್ಲೆಯ ಪಾಸಿಟಿವಿಟಿ ದರ, ಮರಣ ಪ್ರಮಾಣ, ಆಸ್ಪತ್ರೆ ದಾಖಲಾತಿ ವಿವರ, ಲಸಿಕೆ ಕಾರ್ಯಕ್ರಮದ ಪ್ರಗತಿಯ ಮಾಹಿತಿ ಪಡೆದರು.

ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದಶನ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದರು.

ಈ ಎಲ್ಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು. ಶೇ. 35 ರಷ್ಟು ಲಸಿಕೆಯ ಪ್ರಮಾಣ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಶೇ. 100 ರಷ್ಟು ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights