ನ್ಯಾಯಮಂಡಳಿಗಳನ್ನು ದುರ್ಬಲಗೊಳಿಸುತ್ತಿದೆ ಕೇಂದ್ರ ಸರ್ಕಾರ: ಸುಪ್ರೀಂ ಕೋರ್ಟ್‌ ಅಸಮಾಧಾನ

ನ್ಯಾಯಾಂಗದಲ್ಲಿ ಅಗತ್ಯವಿರುವಷ್ಟು ಅಧಿಕಾರಿಗಳು ಮತ್ತು ತಾಂತ್ರಿಕ ಸದಸ್ಯರ ನೇಮಕಾತಿ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದೆ ನ್ಯಾಯಮಂಡಳಿಗಳನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ(ಎನ್‌ಸಿಎಲ್‌ಟಿ) ಸೇರಿದಂತೆ ಪ್ರಮುಖ ನ್ಯಾಯಮಂಡಳಿಗಳಲ್ಲಿ 250ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಉಳಿದಿವೆ. ನ್ಯಾಯಾಂಗ ಅಧಿಕಾರಿಗಳು ಮತ್ತು ತಾಂತ್ರಿಕ ಸದಸ್ಯರು ಇಲ್ಲದೆಯೇ ನ್ಯಾಯಮಂಡಳಿಗಳು ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿವೆ ಎಂದು ಕೋರ್ಟ್‌ ಹೇಳಿದೆ.

ನೇಮಕಾತಿಯ ವಿಚಾರದಲ್ಲಿ ಸರ್ಕಾರದ ಜತೆ ಸಂಘರ್ಷ ನಡೆಸಲು ನ್ಯಾಯಾಲಯ ಬಯಸುವುದಿಲ್ಲ. ಆದರೆ, ಅಪಾರ ಸಂಖ್ಯೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರಿದ್ದ ಪೀಠವು ಸರ್ಕಾರಕ್ಕೆ ಹೇಳಿದೆ.

ನ್ಯಾಯಾಲಯದ ತೀರ್ಪಿಗೆ ಗೌರವ ನೀಡಲು ಕೇಂದ್ರ ಸರ್ಕಾರ ಬಯಸುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ, ನ್ಯಾಯಮಂಡಳಿ ಸುಧಾರಣೆ ಕಾಯ್ದೆಗೆ ತಡೆ ನೀಡುವ ಆಯ್ಕೆಯನ್ನು ನಾವು ಅನುಸರಿಸಬೇಕಾಗುತ್ತದೆ ಅಥವಾ ನ್ಯಾಯಮಂಡಳಿಗಳನ್ನು ಮುಚ್ಚುತ್ತೇವೆ ಅಥವಾ ನಾವೇ ನೇಮಿಸುತ್ತೇವೆ. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಪೀಠವು ಕಟುವಾಗಿ ಹೇಳಿದೆ.

ಸರ್ಕಾರವೂ ಸಂಘರ್ಷವನ್ನು ಬಯಸುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ ಅವರು ಹೇಳಿದ್ದಾರೆ.

ಈ ನಡುವೆ. ನ್ಯಾಯಮಂಡಳಿ ಸುಧಾರಣೆ ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಸಹ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಕಾಯ್ದೆಗೆ ಇತ್ತೀಚೆಗೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅನುಮೋದನೆ ದೊರೆತಿತ್ತು. ರಾಷ್ಟ್ರಪತಿ ಅವರು ಆಗಸ್ಟ್‌ 13ರಂದು ಅಂಕಿತ ಹಾಕಿದ್ದಾರೆ.

ಇದನ್ನೂ ಓದಿ: NEP ಎಂದರೆ ರಾಷ್ಟ್ರೀಯ ಶಿಕ್ಷಣ ನೀತಿ ಅಲ್ಲ; ನಾಗ್ಪುರ ಶಿಕ್ಷಣ ನೀತಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.