ಮಳೆ ಅಬ್ಬರಕ್ಕೆ ನಲುಗಿದ ಆಂಧ್ರ; 23 ಜನರು ಸಾವು; ನೂರಾರು ಮಂದಿ ನಾಪತ್ತೆ
ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಇದೂವರೆಗೂ 23 ಜನರು ಸಾವನ್ನಪ್ಪಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ರಾಯಲಸೀಮ ಪ್ರಾಂತ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಅನಂತಪುರ, ತಿರುಪತಿ, ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಪ್ರದೇಶಗಳು ಹೆಚ್ಚು ಹಾನಿಗೊಳಗಾಗಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಪರಿಣಾಮ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. ಅನ್ನಮಯ್ಯ ನೀರಾವರಿ ಯೋಜನೆಗೂ ಹಾನಿಯಾಗಿದೆ.
ತಿರುಪತಿಯಲ್ಲಿ ಪ್ರವಾಹ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ತಿರುಮಲಕ್ಕೆ ಸಂಪರ್ಕ ಕಲ್ಪಿಸುವ ಘಾಟ್ ರಸ್ತೆಗಳನ್ನು ಮತ್ತು ನಡಿಗೆ ಮಾರ್ಗವನ್ನೂ ಬಂದ್ ಮಾಡಲಾಗಿದೆ. ತಿರುಮಲಕ್ಕೆ ಯಾತ್ರಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ತಿರುಪತಿ ಹೊರವಲಯದ ಸ್ವರ್ಣಮುಖಿ ನದಿಯೂ ತುಂಬಿ ಹರಿಯುತ್ತಿದೆ. ತಿರುಪತಿಯಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ರಾಜ್ಯ ಸಾರಿಗೆಯ 3 ಬಸ್‌ಗಳು ಜಖಂಗೊಂಡಿದ್ದು, ಅದರೊಳಗಿದ್ದ 12 ಮಂದಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಪ್ರವಾಹದಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ರೈಲು, ರಸ್ತೆ ಮತ್ತು ವಿಮಾನ ಸಂಚಾರಕ್ಕೆ ತೊಂದರೆಯಾಗಿದೆ.
ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ 3 ಅಂತಸ್ತಿನ ಹಳೆಯ ಕಟ್ಟಡ ಕುಸಿದು ಮೂವರು ಮಕ್ಕಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ; 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ!