ಜಮ್ಮು ಕಾಶ್ಮೀರ: ದೇವಾಲಯದಲ್ಲಿ ಕಾಲ್ತುಣಿತ; 12 ಯಾತ್ರಿಗಳು ಸಾವು

ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಾಲಯದಲ್ಲಿ ಭಕ್ತರ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಸುಮಾರು 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪರಿಸ್ಥಿತಿಯನ್ನು “ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ” ಎಂದು ಸಚಿವರೊಬ್ಬರು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಖಚಿತಪಡಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಲು ಅಪಾರ ಸಂಖ್ಯೆಯ ಭಕ್ತರು ವೈಷ್ಣೋದೇವಿ ಭವನವನ್ನು ಪ್ರವೇಶಿಸಿದಾಗ ನೂಕುನುಗ್ಗಲು ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮಾತಾ ವೈಷ್ಣೋ ದೇವಿ ಭವನದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಕಾಳ್ತುಳಿತದಿಂದ ಸಾವಿಗೀಡಾದವರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳನ್ನು, ಗಾಯಾಳುಗಳಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

“ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣಹಾನಿಯಾಗಿರುವುದು ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ ಮತ್ತು ಗಾಯಾಳುಗಳೊಂದಿಗೆ ಪ್ರಾರ್ಥನೆಗಳು” ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.

“ನಾನು ಪ್ರಧಾನಿಯವರೊಂದಿಗೆ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಅವರಿಗೆ ವಿವರಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಹಾಗೂ ಗಾಯಗೊಂಡವರಿಗೆ ₹2 ಲಕ್ಷ ಪರಿಹಾರ ನೀಡಲಾಗುವುದು” ಎಂದು ಘೋಷಿಸಿರುವ ಅವರು, ಚಿಕಿತ್ಸೆಯ ವೆಚ್ಚವನ್ನು ದೇಗುಲ ಮಂಡಳಿಯೇ ಭರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Fact Check: ಬಾಲಕಿಗೆ ಚಾಕುವಿನಿಂದ ಇರಿದ ಬಾಲಕ; ಇದು ಲವ್‌ ಜಿಹಾದ್‌ ಕೃತ್ಯವಾ? ಸತ್ಯವೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights