ಫ್ಯಾಕ್ಟ್‌ಚೆಕ್ : 5 ರಾಜ್ಯಗಳ ಫಲಿತಾಂಶದ ನಂತರ BJP ಮಹಿಳಾ ಕಾರ್ಯಕರ್ತರು ಮದ್ಯಪಾನ ಮಾಡುತ್ತ ಎಂಜಾಯ್ ಮಾಡುತ್ತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಹುಮತ ಪಡೆದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಅದೇ ಸಮಯದಲ್ಲಿ, ಮಿಜೋರಾಂನಲ್ಲಿ ಜೋರಾಮ್ ಪೀಪಲ್ಸ್ ಮೂವ್ಮೆಂಟ್  ಸರ್ಕಾರವನ್ನು ರಚಿಸಲಿದೆ. ಚುನಾವಣಾ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

BJP ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಎಣ್ಣೆ ಪಾರ್ಟಿ ಮಾಡುವ ಮೂಲಕ ವಿಜಯೋತ್ಸವವನ್ನು ಆಚರಿಸುತ್ತಿದ್ದಾರೆ ಎಂದು  ಕೆಲವು ಮಹಿಳೆಯರು ಮದ್ಯಪಾನ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದ ಕೀ ಫ್ರೇಮ್‌ಗಳನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮಹಿಳೆಯರು ಮದ್ಯಪಾನ ಮಾಡುತ್ತ ಎಂಜಾಯ್ ಮಾಡುತ್ತಿರುವ ವಿಡಿಯೋ ದೃಶ್ಯಾವಳಿಗಳು ಚುನಾವಣಾ ಫಲಿತಾಂಶಕ್ಕೂ ಮುನ್ನ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದು ಕಂಡುಬಂದಿದೆ.

ನವೆಂಬರ್ 18 ರಂದು ಮಾಡಲಾದ ಟ್ವೀಟ್‌ನಲ್ಲಿ ‘ತೆಲಂಗಾಣ ನಾರಿ’ ಎಂದು ಬರೆಯಲಾದ ಈ ವೀಡಿಯೊ ಲಭ್ಯವಾಗಿದೆ. ಅಂದರೆ, ಈ ವಿಡಿಯೋ ಚುನಾವಣಾ ಫಲಿತಾಂಶಕ್ಕೂ ಮೊದಲೇ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಡಿಸೆಂಬರ್ 3 ರಂದು. ಆದರೆ ಈ ವಿಡಿಯೋ ಪ್ರಸಾರವಾಗಿರುವುದು  ನವೆಂಬರ್ ತಿಂಗಳಿನಲ್ಲಿ.

“ಚುನಾವಣೆ ಫಲಿತಾಂಶ ಹೊರಬೀಳುವ ಮೊದಲೇ ಇದು ವೈರಲ್ ಆಗಿದೆ ಎಂದು ತೆಲಂಗಾಣದ ಸ್ಥಳೀಯ ಪತ್ರಕರ್ತ ಶ್ರೀ ಹರ್ಷ ಹೇಳಿದ್ದಾರೆ, ಇದು ತೆಲಂಗಾಣದ ವಿಡಿಯೋವಾಗಿದ್ದು, ಇದರಲ್ಲಿ ಬುಡಕಟ್ಟು ಮಹಿಳೆಯರು ಮದ್ಯ ಸೇವಿಸುತ್ತಿದ್ದಾರೆ. ಇದು ದಸರಾ ಸಮಯದ ವೀಡಿಯೋ ಇರಬಹುದು ಎಂದು ಹರ್ಷ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಉತ್ತೇಜನಗೊಂಡ BJP ಮಹಿಳಾ ಕಾರ್ಯಕರ್ತರು ಮದ್ಯಪಾನ ಸೇವಿಸಿ ಸಂಭ್ರಮಿಸುತ್ತಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಸಂಬಂಧವಿಲ್ಲದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : CM ವಿರುದ್ದ BJP ಶಾಸಕ ಯತ್ನಾಳ್ ಮಾಡಿದ ಆರೋಪ ಸುಳ್ಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights