ಫ್ಯಾಕ್ಟ್‌ಚೆಕ್ : ಗ್ಯಾರೆಂಟಿ ಯೋಜನೆಗಳನ್ನು ರದ್ದು ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿಲ್ಲ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನರಿಗೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ 5 ಗ್ಯಾರಂಟಿಗಳನ್ನು ಘೋಷಿಸಿ ಅದರಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಈ ಎಲ್ಲಾ ಯೋಜನೆಗಳು ಸುಮಾರು 10 ವರ್ಷಗಳ ಕಾಲ ಅಸ್ತಿತ್ವದಲ್ಲಿ ಇರುತ್ತದೆ, ಜನರಿಗೆ ಯಾವುದೇ ಚಿಂತೆ ಬೇಡ ಎಂದು ಕೂಡ ಸರ್ಕಾರ ಹೇಳಿತ್ತು. ಆದರೆ ಇದೀಗ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳು ರದ್ದಾಗುವ ಮಾತನ್ನಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಸರ್ಕರದ ಗ್ಯಾರೆಂಟಿ ಯೋಜನೆಗಳನ್ನು ರದ್ದುಪಡಿಸುತ್ತೇವೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಕಿಂಗ್ ನ್ಯೂಸ್ ನೀಡಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹೊಸ ಕನ್ನಡ ಎಂಬ ಸುದ್ದಿ ತಾಣದಲ್ಲಿ “ಈ ದಿನದಿಂದ ‘ಗ್ಯಾರಂಟಿ’ ಯೋಜನೆಗಳು ರದ್ದು: ಡಿ ಕೆ ಶಿವಕುಮಾರ್ ಕೊಟ್ರು ಶಾಕಿಂಗ್ ಸ್ಟೇಟ್ಮೆಂಟ್ “ ಎಂಬ ಟೈಟಲ್‌ನೊಂದಿಗೆ ಸುದ್ದಿಯೊಂದನ್ನು ಪ್ರಕಟಿಸಿದೆ.
ಕೆಲವು ಬಿಜೆಪಿ ಮತ್ತು ಬಲಪಂಥೀಯ ಪ್ರತಿಪಾದಕ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಸುದ್ದಿಯ ಸ್ಕ್ರೀನ್‌ಶಾಟ್ ಬಳಸಿಕೊಂಡು ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಗ್ಯಾರೆಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಪಡಿಸಲಿದೆ ಎಂದು ಡಿ.ಕೆ.ಶಿವಕುಮಾರ್ ನಿಜವಾಗಿಯೂ ಹೇಳಿದ್ದಾರೆಯೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದಂತೆ ತಾನು ಚುನಾವಣಾ ಪೂರ್ವದಲ್ಲಿ ಘೋಷಿಸಿದಂತಹ 5 ಗ್ಯಾರೆಂಟಿ ಯೋಜನೆಗಳ ಪೈಕಿ 4 ಯೋಜನೆಗಳನ್ನು ಸರ್ಕಾರ ಅನುಷ್ಠಾನ ಮಾಡಿದ. 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆ, ಉಚಿತ ಪಡಿತರ ಅಕ್ಕಿ ( ಖಾತೆಗೆ ರೂ 170 ಐದು ಕೆ.ಜಿ.ಅಕ್ಕಿಗೆ), ಮನೆ ಯಜಮಾನಿಗೆ ರೂ 2000 ನೀಡುವ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿದ್ದು ಉಳಿದ ಯುವನಿಧಿ ಒಂದು ಯೋಜನೆ ಜಾರಿಗೆ ಬರಬೇಕಿದೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಈ ಯೋಜನೆಗಳನ್ನು ರದ್ದು ಮಾಡುತ್ತೇವೆ ಎಂದು ಹೇಳಿದ್ದಾರೆಯೇ ಎಂದು ಪರಿಶೀಲಿಸಿದಾಗ ಇದೊಂದು ಅಂತಹ ಹೇಳಿಕೆಯನ್ನು ಡಿ.ಕೆ. ಶಿವಕುಮಾರ್ ನೀಡಿಲ್ಲ ಎಂದು ತಿಳಿದುಬಂದಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂಪಾಯಿ ಉಳಿತಾಯವಾಗುತ್ತಿದೆ. ಬಿಜೆಪಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕಾನೂನುಗಳನ್ನು ತಂದು ಗ್ಯಾರಂಟಿ ಬಂದ್ ಮಾಡಬಹುದು ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನವೆಂಬರ್ 19 ರಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ2023 ನವೆಂಬರ್ 19 ರಂದು ಡಿ.ಕೆ.ಶಿವಕುಮಾರ್ ಅವರು ಮಾತನಾಡಿದ್ದಾರೆ. ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಾಗ ಬಿಜೆಪಿಯವರು ವಿರೋಧಿಸಿದರು. ಆದರೆ ಇಂದು ಎಲ್ಲ ಬಿಜೆಪಿ ಕಾರ್ಯಕರ್ತರು ಕೂಡ ಈ ಗ್ಯಾರಂಟಿಗಳ ಲಾಭವನ್ನು ಪಡೆಯುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಕಡಿತ ಮಾಡುವುದು, ನಿಲ್ಲಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ. ಆದರೆ, ನಮ್ಮ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಯಾವುದಾದರು ಕಾನೂನು ತಂದು ಗ್ಯಾರಂಟಿ ಯೋಜನೆಗಳಿಗೆ ಸಮಸ್ಯೆ ಮಾಡಬಹುದು. ಆಗ ಯೋಜನೆಗಳು ಬಂದ್ ಆಗುವ ಸಾಧ್ಯತೆ ಇದೆ. ಅವರ ಈ ಬುದ್ಧಿಯನ್ನು ಜನರಿಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು, ಮುಖಂಡರು ಮಾಡಬೇಕು,” ಎಂದು ಡಿಕೆ ಶಿವಕುಮಾರ್ ಕರೆ ನೀಡಿದರು.
ಒಟ್ಟಾರೆಯಾಗಿ ಹೇಳುವುದಾದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗ್ಯಾರೆಂಟಿ ಯೋಜನೆಗಳನ್ನು ರದ್ದು ಮಾಡುತ್ತೇವೆ ಎಂದು ಹೇಳಿಲ್ಲ, ಬದಲಿಗೆ ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಯಾವುದಾದರು ಕಾನೂನು ತಂದು ಗ್ಯಾರಂಟಿ ಯೋಜನೆಗಳಿಗೆ ಸಮಸ್ಯೆ ಮಾಡಬಹುದು. ಆಗ ಯೋಜನೆಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಹೇಳಿರುವುದನ್ನು ತಿರುಚಿ ಸುದ್ದಿ ಪ್ರಸಾರ ಮಾಡಲಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ಅಯೋಧ್ಯೆಯ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸುವ ಶ್ರೀರಾಮನ ವಿಗ್ರಹ ನಿರ್ಮಿಸುತ್ತಿರುವುದು ಮುಸ್ಲಿಮರಲ್ಲ

