FACT CHECK | ಜೈಪುರದ ಎಲ್‌ಪಿಜಿ ಟ್ಯಾಂಕರ್ ಅಪಘಾತದ ಮೃತರಿಗೆ ಕೋಟಿ ಕೋಟಿ ದೇಣಿಗೆ ನೀಡಿದ್ರಾ ಕೊಹ್ಲಿ ಮತ್ತು ದೋನಿ
ಜೈಪುರದ ಹೆದ್ದಾರಿಯಲ್ಲಿ ಸಂಭವಿಸಿದ ಎಲ್‌ಪಿಜಿ ಟ್ಯಾಂಕರ್ ಅಪಘಾತದಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಇದೀಗ ಈ ಅಪಘಾತಕ್ಕೆ ಸಂಬಂಧಿಸಿದ ಮೂರು ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಜೈಪುರ ಅಪಘಾತದ ಸಂತ್ರಸ್ತರಿಗೆ ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಆರ್ಥಿಕವಾಗಿ ಸಹಾಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ಧೋನಿ 50 ಕೋಟಿ ನೀಡಿದ್ದರೆ, ಕೊಹ್ಲಿ 120 ಕೋಟಿ ನೀಡಿದ್ದಾರೆ ಎಂದು ಕೆಲವು ಬಳಕೆದಾರರು ಹೇಳಿಕೊಳ್ಳುತ್ತಿದ್ದಾರೆ.
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರ, ‘‘ಡಿಸೆಂಬರ್ 25 ರಂದು ಜೈಪುರ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ವಿರಾಟ್ ಕೊಹ್ಲಿ 10 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ’’ ಎಂದು ಪೋಸ್ಟ್ ಮಾಡಿದ್ದಾರೆ.
ಹಾಗೆಯೆ ಹಾರ್ದಿಕ್ ಪಾಂಡ್ಯ ಕುರಿತು, ‘‘ಜೈಪುರ ಅಪಘಾತದಲ್ಲಿ ಮೃತಪಟ್ಟವರಿಗೆ ಹಾರ್ದಿಕ್ ಪಾಂಡ್ಯ 20 ಕೋಟಿ ರೂ. ನೀಡಿದ್ದಾರೆ. ಇವರಿಗೆ ಅಭಿನಂದನೆಗಳು’’ ಎಂದು ಬರೆದಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವಂತೆ ಎಂಎಸ್ ಧೋನಿ, ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರು ಈ ಅಪಘಾತದ ಸಂತ್ರಸ್ತರಿಗೆ ದೇಣಿಗೆ ನೀಡಿದ್ದಾರೆಯೇ ಎಂದು ಗೂಗಲ್ನಲ್ಲಿ ಸರ್ಚ್ ಮಾಡಿದಾಗ,ಾದ್ನು ದೃಢೀಕರಿಸುವ ಯಾವುದೇ ವರದಿ ಕಂಡುಬಂದಿಲ್ಲ. ಸ್ಟಾರ್ ಕ್ರಿಕೆಟಿಗರು ಇಷ್ಟು ದೊಡ್ಡ ಮೊತ್ತವನ್ನು ದೇಣಿಗೆಯಾಗಿ ನೀಡಿದ್ದರೆ ಅದು ದೊಡ್ಡ ಸುದ್ದಿಯೇ ಆಗಿರುತ್ತಿತ್ತು. ಆದರೆ, ಅಂತಹ ಯಾವುದೇ ವರದಿಗಳು ಲಭ್ಯವಾಗಿಲ್ಲ.
ಮತ್ತಷ್ಟು ಸರ್ಚ್ ಮಾಡಿದಾಗ, ಡಿಸೆಂಬರ್ 20 ರಂದು ಟಿವಿ9 ಕನ್ನಡ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಸುದ್ದಿಯೊಂದು ಲಭ್ಯವಾಗಿದ್ದು, ಸುದ್ದಿಯ ಪ್ರಕಾರ, ಜೈಪುರ ಗ್ಯಾಸ್ ಟ್ಯಾಂಕರ್ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ (ಈಗ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ), 41 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜೈಪುರ ಅಗ್ನಿ ದುರಂತದ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ’’ ಎಂದು ವರದಿಯಾಗಿದೆ.
ವಿರಾಟ್ ಕೊಹ್ಲಿ, ಎಂ ಎಸ್ ಧೋನಿ ಹಾಗೂ ಹಾರ್ದಿಕ್ ಪಾಂಡ್ಯ ಅವರ ಇನ್ಸ್ಟಾ, ಫೇಸ್‌ಬುಕ್ ಹಾಗೂ ಎಕ್ಸ್ ಖಾತೆಯಲ್ಲಿ ಈ ಅಪಘಾತಕ್ಕೆ ಸಂಬಂಧಿಸಿದಂತೆ ಏನಾದರು ಪೋಸ್ಟ್ ಮಾಡಿದ್ದಾರೆಯೇ ಎಂದು ಸರ್ಚ್ ಮಾಡಿದಾಗ ಅಂತಹ ಯಾವುದೇ ಪೋಸ್ಟ್ ಕಂಡುಬಂದಿಲ್ಲ.
ಈ ಹಿಂದೆಯೂ ಧೋನಿ ಮತ್ತು ವಿರಾಟ್ ಕೊಹ್ಲಿ ಬಗ್ಗೆ ಇಂತಹ ಅನೇಕ ಹೇಳಿಕೆಗಳು ವೈರಲ್ ಆಗಿತ್ತು. ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ಧೋನಿ ಮತ್ತು ವಿರಾಟ್ ಕೊಹ್ಲಿ ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಹೇಳಿಕೆ ಎಲ್ಲೆಡೆ ಹರಿದಾಡಿದ್ದವು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಪ್ರಧಾನಿ ಮೋದಿ ಭಾಗವಹಿಸಿದ್ದ ಕುವೈತ್ ಕಾರ್ಯಕ್ರಮದಲ್ಲಿ ಕುರ್ಚಿಗಳು ಖಾಲಿ ಖಾಲಿ ಇದ್ದವೇ?

