FACT CHECK | EVM ನಿಂದಾಗಿ ಮೋದಿ ಪ್ರಧಾನಿಯಾಗಿದ್ದಾರೆ ಎಂದು ಹೇಳಿದ್ರಾ ಡೊನಾಲ್ಡ್ ಟ್ರಂಪ್?
ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಅಮೆರಿಕ ಭೇಟಿಯ ನಂತರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಭಾರತದಲ್ಲಿ EVM ವಂಚನೆಯ ಮೂಲಕ ಮೋದಿ ಚುನಾವಣೆಯನ್ನು ಗೆದ್ದಿದ್ದಾರೆ ಎಂದು ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಭಾರತದಲ್ಲಿ EVM ವಿಚಾರ ಚರ್ಚೆಯಲ್ಲಿರುವ ಹೊತ್ತಿನಲ್ಲಿ ಈ ಪೋಸ್ಟ್ ಕೂಡ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತಿದೆ.

“ಅಮೆರಿಕದ ಅಧ್ಯಕ್ಷರಿಗೂ ಭಾರತದಲ್ಲಿ ಪ್ರಧಾನಿ ಮೋದಿ ಅವರು EVM ವಂಚನೆಯ ಮೂಲಕ ಗೆದ್ದಿದ್ದಾರೆ ಎಂಬುದು ತಿಳಿದಿದೆ. ಹಾಗಾಗಿ ಈ ಕುರಿತು ತನಿಖೆ ಆಗಬೇಕು” ಎಂದೆಲ್ಲ ಬರೆದುಕೊಂಡು ಪೋಸ್ಟ್ ಮಾಡುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ಪ್ರಧಾನಿ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಂದರ್ಭದ ವಿಡಿಯೋಗಳನ್ನು ಗಮನಿಸಿದ್ದೇವೆ, ಇಲ್ಲಿ ಟ್ರಂಪ್ ಅವರು ಪ್ರಧಾನಿ ಮೋದಿ ಅವರ ಭೇಟಿಯ ವೇಳೆ ಮೋದಿ ವಿರುದ್ಧ ಹೇಳಿಕೆ ನೀಡಿರುವ ಒಂದೇ ಒಂದು ದೃಶ್ಯಗಳು ಲಭ್ಯವಾಗಿಲ್ಲ.
ಇನ್ನು ಟ್ರಂಪ್ ಮತ್ತು ಪ್ರಧಾನಿ ಮೋದಿ ಅವರ ಜಂಟಿ ಸುದ್ದಿಗೋಷ್ಠಿಯನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಆದರೆ ಇಲ್ಲಿಯೂ ಕೂಡ ಟ್ರಂಪ್ ಅವರು ಪ್ರಧಾನಿ ಮೋದಿ ಅವರ ಚುನಾವಣೆ ಗೆಲುವಿನ ಕುರಿತು ಯಾವುದೇ ಹೇಳಿಕೆ ನೀಡಿರುವುದು ಕಂಡುಬಂದಿಲ್ಲ. ಈ ಭೇಟಿಯ ವೇಳೆ ಭಾರತ ಮತ್ತು ಅಮೆರಿಕದ ನಡುವೆ ಇಂಧನ, ಶಿಕ್ಷಣ, ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಸೇರಿದಂತೆ ವಿವಿಧ ರೀತಿಯ ಒಪ್ಪಂದಗಳಿಗೆ ಸಹಿ ಹಾಕಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಇನ್ನು 13 ಫೆಬ್ರವರಿ 2025 ರಂದು ನಡೆದ ಪ್ರಧಾನಿ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜಂಟಿ ಪತ್ರಿಕಾಗೋಷ್ಠಿಯ ಹೇಳಿಕೆಯನ್ನು ಅಮೆರಿಕದ ವೈಟ್ ಹೌಸ್ ತನ್ನ ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟಗೊಳಿಸಿದೆ. ಇದನ್ನು ಕೂಡ ಸಂಪೂರ್ಣವಾಗಿ ಪರಿಶೀಲನೆ ನಡೆಸಿದಾಗ ಇದರಲ್ಲಿ ಎಲ್ಲಿಯೂ ಕೂಡ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿ ಅವರ ಚುನಾವಣೆ ಗೆಲುವಿನ ಕುರಿತು ಮಾತನಾಡಿರುವುದು ಕಂಡುಬಂದಿಲ್ಲ. ಹೀಗಾಗಿ ವೈರಲ್ ಪೋಸ್ಟ್ ಜನರ ದಾರಿ ತಪ್ಪಿಸಲು ಹಂಚಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಲೋಕಸಭೆ ಚುನಾವಣೆಯಲ್ಲಿ EVM ವಂಚನೆಯ ಮೂಲಕ ಬಹುದೊಡ್ಡ ಗೆಲುವನ್ನು ಸಾಧಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು. ಈ ರೀತಿ ಯಾವುದೇ ವಿಚಾರವನ್ನು ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ವಿರಾಟ್ ಕೊಹ್ಲಿಯ 2017ರ ಜಾಹೀರಾತಿನ ವಿಡಿಯೋವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ

