FACT CHECK | ಕನ್ಹಯ್ಯ ಕುಮಾರ್ ಮೇಲೆ ಹಲ್ಲೆ ಮಾಡಿದ ಹಳೆಯ ವಿಡಿಯೋನ್ನು ಇತ್ತೀಚಿನದ್ದು ಎಂದು ಹಂಚಿಕೆ
ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಬಿಹಾರದಲ್ಲಿ ಇತ್ತೀಚೆಗೆ ನಡೆದ ಘಟನೆಯೆಂದು ಹಂಚಿಕೊಳ್ಳಲಾಗುತ್ತಿದೆ. ಬಿಹಾರದಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದೆ. ಅಂತಹ ಪರಿಸ್ಥಿತಿಯಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಕನ್ಹಯ್ಯಾ ಕುಮಾರ್ ಅವರಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡು ಬಂದಿದೆ. ಹಾಗಾಗಿ ಇದನ್ನು ಬಿಹಾರ ಚುನಾವಣ ಪ್ರಚಾರದ ಸಂದರ್ಭದಲ್ಲೇ ನಡೆದಿದೆ ಎಂದು ಹಲವರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತರುವ ಪೋಸ್ಟ್‌ನಲ್ಲಿ ಮಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ವಿಡಿಯೋದ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ವೀಡಿಯೊದ ದೀರ್ಘ ಆವೃತ್ತಿ ಲಭ್ಯವಾಗಿದೆ. ಈ ವೀಡಿಯೊವನ್ನು ಮೇ 18, 2024 ರಂದು ಹಂಚಿಕೊಳ್ಳಲಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ದೆಹಲಿಯಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಮಾಹಿತಿಯ ಆಧಾರದ ಮೇಲೆ, ನಾವು ಇತರ ಕೀವರ್ಡ್‌ಗಳನ್ನು ಬಳಸಿಕೊಂಡು Google ನಲ್ಲಿ ಸರ್ಚ್ ಮಾಡಿದಾಗ, ಈಟಿವಿ ಭಾರತ್‌ನ ವೆಬ್‌ಸೈಟ್‌ನಲ್ಲಿ ಈ ವೈರಲ್ ವಿಡಿಯೋಗೆ ಸಂಬಂಧಿಸಿದ ವರದಿ ಲಭ್ಯವಾಗಿದೆ . ಈ ವರದಿಯನ್ನು 17 ಮೇ 2024 ರಂದು ಪ್ರಕಟಿಸಲಾಯಿತು. ವರದಿಯ ಪ್ರಕಾರ, “ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರ ಮೇಲೆ ದಾಳಿ ನಡೆಸಲಾಯಿತು. ಅವರು ತಮ್ಮ ಬೆಂಬಲಿಗರೊಂದಿಗೆ ನ್ಯೂ ಉಸ್ಮಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ತಾರ್ ನಗರ್ ಚೌತಾ ಪುಷ್ಟದಲ್ಲಿರುವ ಕೌನ್ಸಿಲರ್ ಕಚೇರಿಯಲ್ಲಿ ನಿಂತಿದ್ದರು. ನಂತರ ಕೆಲವರು ಅಲ್ಲಿಗೆ ಬಂದು ಕನ್ಹಯ್ಯಾ ಕುಮಾರ್ ಜೊತೆ ಜಗಳವಾಡಲು ಪ್ರಾರಂಭಿಸಿದರು. ಈ ಸಮಯದಲ್ಲಿ ಅಲ್ಲಿ ಗದ್ದಲ ಉಂಟಾಯಿತು. ಹಲ್ಲೆ ನಡೆಸಿದವರು ಮೊದಲು ಕನ್ಹಯ್ಯಾ ಅವರಿಗೆ ಹಾರ ಹಾಕಿ ನಂತರ ಅವರನ್ನು ಹೊಡೆಯಲು ಪ್ರಾರಂಭಿಸಿದರು.” ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಕಂಡು ಬಂದಿದೆ.

17 ಮೇ, 2024 ರಂದು ಆಜ್ ತಕ್ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ , ಇಬ್ಬರು ವ್ಯಕ್ತಿಗಳು ದಾಳಿಯ ಹೊಣೆ ಹೊತ್ತುಕೊಂಡು ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ಕನ್ಹಯ್ಯಾ ದೇಶ ಮತ್ತು ಭಾರತೀಯ ಸೇನೆಯನ್ನು ಅವಮಾನಿಸಿದ್ದರಿಂದ ಅವರು ಹೀಗೆ ಮಾಡಿದ್ದಾರೆ ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ. 7 ಜೂನ್ 2024 ರಂದು ನ್ಯೂಸ್ 18 ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ , ಕನ್ಹಯ್ಯಾ ಕುಮಾರ್ ಅವರನ್ನು ಕಪಾಳಮೋಕ್ಷ ಮಾಡಿದ್ದಕ್ಕಾಗಿ ಘಾಜಿಯಾಬಾದ್ ಪೊಲೀಸರು ದಕ್ಷ ಚೌಧರಿ ಮತ್ತು ಅನು ಚೌಧರಿ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ಟಾರೆಯಾಗಿ ಹೇಳುವುದಾದರೆ ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಅವರಿಗೆ ಕಪಾಳಮೋಕ್ಷ ಮಾಡಿದ ಒಂದು ವರ್ಷ ಹಳೆಯ ವಿಡಿಯೋವನ್ನು ಇತ್ತಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಶ್ರೀನಗರದ ಹಳೆಯ ವಿಡಿಯೋವನ್ನು ಬಲೂಚಿಸ್ತಾನದಲ್ಲಿ ತಿರಂಗಾ ರ್‍ಯಾಲಿ ಎಂದು ತಪ್ಪಾಗಿ ಹಂಚಿಕೆ

