ಮುಂಬೈ ವಿಮಾನ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದ 10 ಮಂದಿಗೆ ಕೊರೊನಾ ಸೋಂಕು!

ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಸಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ 10 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್​ ಹಾವಳಿ ಹೆಚ್ಚಾಗುತ್ತಲೇ ಇದೆ. ಇಂದು ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಇಂದು ಇಬ್ಬರು ವ್ಯಕ್ತಿಗಳು ಕೊರೋನಾಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 68ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 2902 ಕೊರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು 183 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಸದ್ಯ ಈ ಮಹಾಮಾರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರನ್ನೂ ಬಿಟ್ಟಿಲ್ಲ. ವಿಮಾನ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ 10 ಮಂದಿಗೆ ಕೊರೊನಾ ಸೋಂಕು ಹರಡಿದೆ. ಶಿಬಿರದಲ್ಲಿ ಜೊತೆಗೆ ವಾಸವಿದ್ದ ಎಲ್ಲ 152 ಮಂದಿಯ ತಪಾಸಣೆಗೆ ಅರೆ ಮಿಲಿಟರಿ ಪಡೆ ನಿರ್ಧರಿಸಿದೆ. ನಮ್ಮ ಜವಾನರ ಪೈಕಿ ಒಬ್ಬರಿಗೆ ಮಾರ್ಚ್ 27 ರಂದು ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅವರ ಜೊತೆಗೆ 11 ಮಂದಿ ಸಂಪರ್ಕದಲ್ಲಿದ್ದರು. ಮುಂಜಾಗ್ರತಾ ಕ್ರಮವಾಗಿ ಇತರರನ್ನು ತಪಾಸಣೆಗೆ ಗುರಿಪಡಿಸಲಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸದ್ಯ ಸೋಂಕಿತ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದವರನ್ನು 14 ದಿನಗಳ ಕ್ವಾರಂಟೈನ್ ನಲ್ಲಿ ಇಡಲಾಗುತ್ತದೆ ಎಂದು ಸಿಐಎಸ್ ಎಫ್ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಇದುವರೆಗೆ 128 ಮಂದಿಗೆ ಕೊರೋನಾ ಸೊಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 11 ಮಂದಿ ಡಿಸ್ ಚಾರ್ಜ್ ಆಗಿದ್ದಾರೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights