ಗಡಿವಿವಾದ: ಮೌನ ಮುರಿದ ಮೋದಿ; ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದ ಪ್ರಧಾನಿ!

ಭಾರತ ಮತ್ತು ಚೀನಾ ಸೈನಿಕರ ನಡುವೆ ಲಡಾಖ್ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಭಾರತೀಯ 20 ಸೈನಿಕರು ಹತ್ಯೆಯಾಗಿದ್ದು, ಈ ಬಗ್ಗೆ ಇಂದು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿಯವರು ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಾರಕ ಕೊರೋನಾ ವೈರಸ್ ನಿರ್ವಹಣೆ ವಿಚಾರವಾಗಿ ನಿನ್ನೆಯಿಂದ ನಡೆಯುತ್ತಿರುವ ಎಲ್ಲ ರಾಜ್ಯಗಳ ಸಿಎಂಗಳ ಮ್ಯಾರಥಾನ್ ಸಭೆಯ 2ನೇ ದಿನ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಮೊದಲು ಹುತಾತ್ಮ ಸೈನಿಕರಿ ಆತ್ಮಕ್ಕೆ 2 ನಿಮಿಷ ಶಾಂತಿ ಕೋರಿದರು.

ಸೈನಿಕರ ಹತ್ಯೆಯ ವಿಚಾರವಾಗಿ ಮಾತನಾಡಿದ ಪ್ರಧಾನಿ ಮೋದಿ, ‘ಭಾರತ ಶಾಂತಿಯನ್ನು ಬಯಸುತ್ತದೆ ಆದರೆ ಪ್ರಚೋದಿಸಿದಾಗ, ಯಾವುದೇ ರೀತಿಯ ಪರಿಸ್ಥಿತಿ ಇರಲಿ ಭಾರತ ಅದಕ್ಕೆ ಸೂಕ್ತ ತಿರುಗೇಟು ನೀಡಲು ಸಮರ್ಥವಾಗಿದೆ. ಈ ಮೂಲಕ ನಾನು ದೇಶದ ಪ್ರಜೆಗಳಿಗೆ ಭರವಸೆ ನೀಡುತ್ತೇನೆ. ಅದೇನೆಂದರೆ ಸೈನಿಕರ ಬಲಿದಾನ ವ್ಯರ್ಥವಾಗದು. ನಮಗೆ, ದೇಶದ ಏಕತೆ ಮತ್ತು ಸಾರ್ವಭೌಮತ್ವ ಅತ್ಯಂತ ಮುಖ್ಯವಾದದ್ದು. ಆದಕೆ ಪ್ರಚೋದಿಸಿದರೆ ಅದಕ್ಕೆ ತಕ್ಕ ಶಾಸ್ತಿ ಖಂಡಿತ ಮಾಡುತ್ತೇವೆ ಎಂದು ಹೇಳಿದರು.

ಲಡಾಖ್‌ನಲ್ಲಿ ವೀರಮರಣವನ್ನಪ್ಪಿದ ಸೈನಿಕರ ಶೌರ್ಯ ಅಪ್ರತಿಮವಾದದ್ದು. ಅವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಈ ಬಗ್ಗೆ ಯಾರಿಗೂ ಸ್ವಲ್ಪವೂ ಅನುಮಾನ ಬೇಡ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನು ಇಂದಿನ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 15 ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights