ಬ್ರಾಹ್ಮಣರಿಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ: ಯಡಿಯೂರಪ್ಪ ಸರ್ಕಾರ ಆದೇಶ
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಬೇಕು ಎಂದು ಕಂದಾಯ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಎಂ.ಎಲ್.ವರಲಕ್ಷ್ಮಿ ಆದೇಶ ಹೊರಡಿಸಿದ್ದಾರೆ.
ಬ್ರಾಹ್ಮಣ ಸಮಾಜದ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇನ್ನಿತರ ಸೌಲಭ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶಕ್ಕೆ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ. ಇದರೊಂದಿಗೆ ಕೇಂದ್ರ ಸರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ನಾಗರಿಕ ಹುದ್ದೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಗರಿಷ್ಟ ಶೇ.10ರಷ್ಟು ಮೀಸಲಾತಿ ಕಲ್ಪಿಸಿದೆ
ಈ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ’’ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದ್ದಾರೆ.
ಇದರಂತೆ ಬ್ರಾಹ್ಮಣ ಸಮುದಾಯಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವುದಕ್ಕೆ ಕೆಲ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿಕೊಂಡು ದೃಢೀಕರಣ ಪತ್ರಗಳನ್ನು ವಿತರಿಸಬಹುದಾಗಿದೆ.
ರಾಜ್ಯದ ಬ್ರಾಹ್ಮಣ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

