ಯಡಿಯೂರಪ್ಪ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಕಾಂಗ್ರೆಸ್ ನಿರ್ಧಾರ, ಉಳಿಯುತ್ತಾ ಬಿಜೆಪಿ ಸರ್ಕಾರ!
ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಕೊರೊನಾ ಸಂಕಷ್ಟದ ನಡುವೆಯೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ಮಾಡಿದೆ. ಅಲ್ಲದೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ವಿಜಯೇಂದ್ರ, ಮೊಮ್ಮಗ ಸೇರಿದಂತೆ ಅವರು ಇಡೀ ಕುಟುಂಬವೇ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಕೋರಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ನಡೆಸಿರುವ ಕಾಂಗ್ರೆಸ್, ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದೆ. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಮೆಡಿಕಲ್, ಲ್ಯಾಪ್ಟಾಪ್ ಹಂಚಿಕೆ, ವರ್ಗಾವಣೆ, ಅನುದಾನ ವಿಚಾರದಲ್ಲಿಯೂ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ಹಣಕಾಸು ಪರಿಸ್ಥಿತಿ ಅಧೋಗತಿಯಲ್ಲಿದೆ. ಹೀಗಾಗಿ ಸರ್ಕಾರ ಪ್ರಜೆಗಳ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ರೈತರನ್ನು ಅಧೋಗತಿಗೆ ಇಳಿಸುವ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನವಿರೋಧಿ, ರೈತವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದೆ. ಇದರಿಂದ ಸರ್ಕಾರದ ವಿಶ್ವಾಸ ಕಳೆದುಕೊಂಡಿದೆ. ಬಿಜೆಪಿ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಈಗಾಗಲೇ ಅವಿಶ್ವಾಸ ನಿರ್ಣಯ ಪ್ರಸ್ತಾವದ ನೋಟೀಸ್ ಅನ್ನು ವಿಧಾನಸಭಾ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸಲ್ಲಿಕೆ ಮಾಡಲಾಗಿದ್ದುಮ, ಇಂದು ಅಥವಾ ನಾಳೆ (ಶುಕ್ರವಾರ/ಶನಿವಾರ) ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಹೀಗಾಗಿ ಸರ್ಕಾರ ಉಳಿಯುವುದೇ ಅಥವಾ ಉರುಳುವುದೇ ಎಂಬ ಪ್ರಶ್ನೆ ಸರ್ಕಾರದ ಮುಂದಿದೆ.
ಇದನ್ನೂ ಓದಿ: ಐದು ತಿಂಗಳಿಂದ ಸಂಬಳವಿಲ್ಲದೆ ಅತಿಥಿ ಉಪನ್ಯಾಸಕರನ್ನು ಸಂಕಷ್ಟಕ್ಕೆ ನೂಕಿದ ರಾಜ್ಯಸರ್ಕಾರ!

