ಟೊಯೊಟಾ ಕಾರ್ಮಿಕರ ಮೇಲೆ ಜಪಾನ್ ಕಾನೂನುಗಳ ಹೇರಿಕೆ ಸಹಿಸಲ್ಲ: ಸಿದ್ದರಾಮಯ್ಯ
ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ಟೊಯೋಟಾ ಕಿಲೋಕರ್ಸ್ ಕಾರ್ ಕಂಪನಿಯ ಕಾರ್ಮಿಕರು ತಮ್ಮ ಕಂನಿಯ ವಿರುದ್ದದ ಹೋರಾಟ 3 ತಿಂಗಳಿಂದ ನಡೆಯುತ್ತಿದೆ. ಕಂಪನಿಯನ್ನು ಲಾಕ್‌ಡೌಟ್ ಮಾಡುವುದಾಗಿ ನಿರ್ಧರಿಸಿರುವ ಕಂಪನಿ, ತಮ್ಮ ನಿರ್ಧಾರವನ್ನು ಹಿಂಪಡೆಯಬೇಕು. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಲ್ಲಿಯ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ, ಬೆಂಬಲ ಸೂಚಿಸಿದ್ದಾರೆ.
ಮೂರು ತಿಂಗಳಿಂದ ಹೋರಾಟ ನಡೆಸುತ್ತಿರುವ ಕಾರ್ಮಿಕರ ಬೇಡಿಕೆಯನ್ನು ಕಂಪನಿ ಈಡೇರಿಸಬೇಕು ಎಂದು ಹೇಳಿರುವ ಸಿದ್ದರಾಮಯ್ಯ, “ವಿದೇಶಿ ಕಂಪನಿಗಳು ಈ ನೆಲದ ಕಾನೂನಿನ ಅನ್ವಯ ನಡೆದುಕೊಳ್ಳಲಿ” ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹೋರಾಟಕ್ಕೆ ಮಂಡಿಯೂರುತ್ತಿರುವ ಟೊಯೊಟಾ: ಕಾನೂನುಬಾಹಿರ ಷರತ್ತಿಗೆ ಬಗ್ಗುವುದಿಲ್ಲವೆಂದ ಕಾರ್ಮಿಕರು
ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ. 2/5#Toyota
— Siddaramaiah (@siddaramaiah) January 31, 2021
ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಾ ಸುಮಾರು 3 ತಿಂಗಳಾಗುತ್ತಾ ಬಂತು, ಇಷ್ಟರೊಳಗೆ ರಾಜ್ಯ ಸರ್ಕಾರ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಕಾರ್ಮಿಕ ಸಚಿವರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಅಂದ್ರೆ ಸಿಎಂ ಯಡಿಯೂರಪ್ಪ ಅವರೇ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕಿತ್ತು ಎಂದು ಒತ್ತಾಯಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ ಅವರು ಟೊಯೊಟಾ ಕಂಪನಿಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಗಳ ನಡುವೆ ಸಂಧಾನ ಸಭೆ ನಡೆಸಿದ್ದರು. ಕೇವಲ 20 ನಿಮಿಷ ಸಭೆ ನಡೆಸಿ ಸಮಸ್ಯೆ ಬಗೆಹರಿದಿದೆ ಅಂತ ಹೇಳಿದ್ರು. ಸಮಸ್ಯೆ ಬಗೆಹರಿದಿದ್ರೆ ಕಾರ್ಮಿಕರೇಕೆ ಇನ್ನೂ ಮುಷ್ಕರನಿರತರಾಗಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಪ್ರತಿಭಟನೆ ಪೆಂಡಾಲ್ ಕಿತ್ತೆಸೆದು ಟೊಯೊಟಾ ಕಂಪನಿ ದರ್ಪ; ಛತ್ರಿ ಚಳುವಳಿ ಆರಂಭಿಸಿದ ಕಾರ್ಮಿಕರು

