ಮುರುಘಾ ಮಠದ ಹಣ-ಆಸ್ತಿ ದುರ್ಬಳಕೆ: ಮಠದ ಪೀಠಾಧಿಪತಿಗಳಿಗೆ ಹೈಕೋರ್ಟ್‌ ನೋಟಿಸ್‌!

ಚಿತ್ರದುರ್ಗ ಮುರುಘಾ ಮಠಕ್ಕೆ ಸೇರಿದ ಭಾರೀ ಪ್ರಮಾಣದ ಆಸ್ತಿ ಮತ್ತು ಹಣವನ್ನು ದುರುಪಯೋಗ  ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮಠದ ಪೀಠಾಧಿಕಾರಿಗಳ ವಿರುದ್ಧ ಸಲ್ಲಿಸಲಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿರುವ ನ್ಯಾಯಪೀಠ, ಪ್ರತಿವಾದಿ ಮುರುಘಾ ಶರಣರು ಮತ್ತು ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಸೇರಿದಂತೆ ಏಳು ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಮಧ್ಯಂತರ ಅರ್ಜಿ ಸೇರ್ಪಡೆ ಮೇಲ್ಮನವಿ ಕುರಿತಂತೆ ವಿಜಯಕುಮಾರ್ ಎಸ್.ದುರ್ಗದ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಚಿತ್ರದುರ್ಗ ಮುರುಘಾ ಮಠದ ಕೋಟ್ಯಂತರ ರೂ. ಹಣ ಮತ್ತು ಭಾರೀ ಪ್ರಮಾಣದ ಸ್ಥಿರಾಸ್ತಿ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದ್ದು, ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

ಚಿತ್ರದುರ್ಗದ ಮುರುಘಾ ಶರಣರು ಮಠದ ಹಣ, ಸ್ಥಿರಾಸ್ತಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ಅರ್ಜಿದಾರರ ಆರೋಪವಾಗಿದೆ. ಬೆಂಗಳೂರು ನಗರದ ಸಿಸಿಎಚ್ ಕೋರ್ಟ್-56ರಲ್ಲಿ ಶರಣರ ವಿರುದ್ಧದ ಈ ಆರೋಪಗಳಿಗೆ ಸಂಬಂಧಿಸಿದಂತೆ ಯೋಜನಾ ದೂರು (ಸ್ಕೀಮ್ ಸೂಟ್) ದಾಖಲಾಗಿದ್ದು, ಈ ಅಸಲು ದೂರಿನಲ್ಲಿ ನನ್ನನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಅಧೀನ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರ ವಿಜಯಕುಮಾರ್ ಕೋರಿದ್ದರು ಎಂದು ವಾರ್ತಾಭಾರತಿ ವರದಿ ಮಾಡಿದೆ.

ಈ ಅರ್ಜಿಯನ್ನು ಅಧೀನ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ವಿಜಯಕುಮಾರ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights