ಕೊರೊನಾ ಹೆಚ್ಚಳ ಹಿನ್ನೆಲೆ ಇಂದು ಪ್ರಧಾನಿಯೊಂದಿಗೆ ಎಲ್ಲಾ ಸಿಎಂಗಳ ಮಹತ್ವದ ಸಭೆ..!
ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ದಿನಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಲಿವೆ. ಹೀಗಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಮಹತ್ವದ ಸಭೆ ನಡೆಯಲಿದ್ದು ಸಭೆಯಲ್ಲಿ ಎಲ್ಲಾ ರಾಜ್ಯದ ಸಿಎಂಗಳು ಭಾಗಿಯಾಗಲಿದ್ದಾರೆ.
ದೇಶದಲ್ಲಿ ಕೊರೊನಾ 2ನೇ ಅಲೆಯ ಅರ್ಭಟ ಹೆಚ್ಚಾಗುತ್ತಿದ್ದು ಮತ್ತೆ ಆತಂಕವನ್ನು ಹೆಚ್ಚಿಸಿದೆ. ದಿನಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗಲುತ್ತಿದೆ.ಇದು ಇನ್ನೊಂದು ಬಗೆಯ ಭಯ ಸೃಷ್ಟಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇವತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ನಡುವೆ ಮಹತ್ವದ ಸಭೆ ನಡೆಯಲಿದೆ.
ದೇಶದಲ್ಲಿ ಕೊರೊನಾ ರುದ್ರನರ್ತನವಾಡುತ್ತಿದ್ದು, ಜನರಲ್ಲಿ ಭೀತಿ ಹೆಚ್ಚಿಸಿದೆ. ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಈ 11 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಆದ್ಯತೆ ಮೇರೆಗೆ ಚರ್ಚೆ ನಡೆಸಲಾಗುತ್ತದೆ.
ಸಂಜೆ 6.30ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಭೆಯಲ್ಲಿ ವಿಶೇಷವಾಗಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳು ಜಾರಿ ಮಾಡಿರುವ ಕಟ್ಟುನಿಟ್ಟಿನ ನಿಯಮಗಳ ಬಗ್ಗೆ ಚರ್ಚೆ, ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ವಿಕೇಂಡ್ ಲಾಕ್ಡೌನ್, ನೈಟ್ ಕರ್ಫ್ಯೂ ಮತ್ತಿತರ ಕ್ರಮಗಳನ್ನು ಜಾರಿ ಮಾಡುವ ಬಗ್ಗೆ, ದೇಶದ್ಯಾಂತ 18 ವರ್ಷ ಮೇಲ್ಪಟ್ಟ ಎರೆಲ್ಲರಿಗೂ ಕೊರೋನಾ ಲಸಿಕೆ ನೀಡುವ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

