ಆಂಧ್ರದಲ್ಲಿ ಕೊರೊನಾ ನಡುವೆ PUC ಪರೀಕ್ಷೆ; ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೆ 1 ಕೋಟಿ ಪರಿಹಾರ ನೀಡಬೇಕು ಎಂದು ಸುಪ್ರೀಂ ಎಚ್ಚರಿಕೆ!

ಇಡೀ ದೇಶವೇ ಕೊರೊನಾ 2ನೇ ಅಲೆಯಿಂದ ತತ್ತರಿಸಿ ಹೋಗಿದೆ. ಅಲ್ಲದೆ, 3ನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಗಳು ದಟ್ಟವಾಗಿವೆ. ಹೀಗಾಗಿ, ಎಲ್ಲಾ ರಾಜ್ಯಗಳೂ ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಶೈಕ್ಷಣಿಕ ಪರೀಕ್ಷೆಗಳನ್ನು ಮುಂದೂಡಿವೆ. ಆದರೆ, ಆಂಧ್ರ ಸರ್ಕಾರ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಪರೀಕ್ಷೆಯಿಂದಾಗಿ ಒಂದು ವಿದ್ಯಾರ್ಥಿ ಕೊರೊನಾಗೆ ಬಲಿಯಾದರೂ ಅದಕ್ಕೆ ಆಂಧ್ರ ಸರ್ಕಾರವೇ ಜವಾಬ್ದಾರಿ ಮತ್ತು ಮೃತಪಟ್ಟ ವಿದ್ಯಾರ್ಥಿಯ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಪರೀಕ್ಷೆ ನಡೆಸುವ ಸರ್ಕಾರ ನಿರ್ಧಾರವನ್ನು ಖಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, “ಎಲ್ಲಾ ರಾಜ್ಯಗಳು ಪರಿಸ್ಥಿತಿಯನ್ನು ಅವಲೋಕಿಸಿ ಪ್ರಜ್ಞಾಪೂರ್ವಕವಾಗಿ ಪರೀಕ್ಷೆಗಳನ್ನು ಮುಂದೂಡಿವೆ. ಇತ್ತೀಚೆಗೆ ದೇಶದಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡಿದೆ. ಹೀಗಿರುವ ಸಂದರ್ಭದಲ್ಲಿ ಆಂಧ್ರದಲ್ಲಿ ಪರೀಕ್ಷೆಗಳನ್ನು ನಡೆಸುವ ನಿರ್ಧಾರಗಳನ್ನು ತೆಗೆದುಕೊಂಡವರು ಯಾರು? ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ?” ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ಅಧಿಕಾರವೇ ಇಲ್ಲದೇ ಸಿಎಂ ಸ್ಥಾನಕ್ಕೆ ಕಚ್ಚಾಟ; ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಬುಲಾವ್?!

“ಇದು ಪ್ರತಿಯೊಬ್ಬ ವಿದ್ಯಾರ್ಥಿಯ ಆರೋಗ್ಯದ ಪ್ರಶ್ನೆಯಾಗಿದೆ. ನಿಮ್ಮ ಯೋಜನೆಯ ಬಗ್ಗೆ ನಮಗೆ ಮನವರಿಕೆಯಾಗುತ್ತಿಲ್ಲ. ಹೀಗಾಗಿ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ತೆಗೆದುಕೊಂಡ ವ್ಯಕ್ತಿ ಅಥವಾ ಸರ್ಕಾರಿ ಸಂಸ್ಥೆಯನ್ನು ಗುರುತಿಸಿ ನ್ಯಾಯಾಲಯಕ್ಕೆ ವರದಿ ನೀಡಬೇಕು. ಒಂದು ವೇಳೆ ಪರೀಕ್ಷೆಗಳನ್ನು ನಡೆಸಿದರೆ, ಪರೀಕ್ಷೆಯಿಂದ ಸಂಭವಿಸುವ ಸಾವುಗಳಿಗೆ ಸರ್ಕಾರವೇ ಹೊಣೆಯಾಗಿರುತ್ತದೆ. ಮಾತ್ರವಲ್ಲದೆ, ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂ ಕೋರ್ಟ್‌ನ ಎಚ್ಚರಿಕೆಗಳು  ಆಂಧ್ರಪ್ರದೇಶ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು, ಪರೀಕ್ಷೆಯನ್ನು ಏಕೆ ರದ್ದುಗೊಳಿಸಲು ಸಾಧ್ಯವಿಲ್ಲ ಎಂಬುದರ ಬಗ್ಗೆ ಹೊಸ ಅಫಿಡವಿಟ್ ಸಲ್ಲಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ  ಸುಪ್ರೀಂ ಆದೇಶ ನೀಡಿದೆ.

ಇದನ್ನೂ ಓದಿ: ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ವಿರುದ್ದ 11 ಕೇಸ್‌ ದಾಖಲಿಸಿದ ಹೈಕೋರ್ಟ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights