ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ; ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್!
ಬಂಗಾಳಕೊಲ್ಲಿಯ ತೀರದಲ್ಲಿರುವ ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಕರ್ನಾಟಕದಲ್ಲೂ ಇಂದಿನಿಂದ ಸೆಪ್ಟೆಂಬರ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ.
ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡದ ಪರಿಣಾಮ, ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಉತ್ತರ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ ಆಗುವಂತ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆಗಸ್ಟ್ 29ರಂದು ಆರೆಂಜ್ ಅಲರ್ಟ್ ಹಾಗೂ ಆಗಸ್ಟ್ 30ರಂದು ಯೆಲ್ಲೋ ಅಲರ್ಟ್ ಘೋಷಿಸಿಸುವುದಾಗಿ ಮಾಹಿತಿ ನೀಡಿದ್ದಾರೆ.
ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಆಗಸ್ಟ್ 29 ಮತ್ತು 30ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಟೋಕಿಯೋ ಪ್ಯಾರಾಲಿಂಪಿಕ್ಸ್ : ಟಿಟಿಯಲ್ಲಿ ಫೈನಲ್ ಪ್ರವೇಶಿಸಿದ ಭವಿನಾ ಪಟೇಲ್..!

