ಕಾಂಗ್ರೆಸ್‌ನಲ್ಲಿ ಮುಂದುವರೆಯುತ್ತಿದೆ ಬಂಡಾಯ; ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಇಬ್ಬರು ನಾಯಕರ ರಾಜೀನಾಮೆ!

ಕಾಂಗ್ರೆಸ್‌ ಪಕ್ಷದಲ್ಲಿ ಹಳೆಯ ಮತ್ತು ನಿಷ್ಠಾವಂತ ಕಾಂಗ್ರೆಸ್ ನಾಯಕರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಉತ್ತರ ಪ್ರದೇಶದ ಇಬ್ಬರು ಹಿರಿಯ ಮುಖಂಡರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಶೈಲೇಂದ್ರ ಸಿಂಗ್ ಮತ್ತು ರಾಜೇಶ್ ಸಿಂಗ್ ತಮ್ಮ ರಾಜೀನಾಮೆ ಪತ್ರಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರಿಗೆ ಭಾನುವಾರ ಕಳುಹಿಸಿದ್ದಾರೆ.

ಉಭಯ ನಾಯಕರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ತಮ್ಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರಾಗಿ ಲಲ್ಲು ಅಧಿಕಾರ ವಹಿಸಿಕೊಂಡ ನಂತರ ನಿಷ್ಠಾವಂತ ಮತ್ತು ಹಳೆಯ ಕಾಲದಿಂದಲೂ ಕಾಂಗ್ರೆಸ್‌ನಲ್ಲಿರುವ ಸದಸ್ಯರನ್ನು ನಿರ್ಲಕ್ಷಿಸಲಾಗಿದೆ. ಹೀಗಾಗಿ ಪಕ್ಷಕ್ಕಾಗಿ ದುಡಿತ ನಾಯಕರು ಪಕ್ಷವನ್ನು ತೊರೆಯುತ್ತಿದ್ದಾರೆ ಎಂದು ಶೈಲೇಂದ್ರ ಸಿಂಗ್ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಪಕ್ಷದಲ್ಲಿನ ಪರಿಸ್ಥಿತಿಯ ಬಗ್ಗೆ ಹಲವು ಬಾರಿ ತಿಳಿಸಿದ್ದೇನೆ. ಆದರೆ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ, ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದನ್ನು ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ್ತೊಂದು ತಲೆನೋವು; ಛತ್ತೀಸ್‌ಘಡ ಮುಖ್ಯಮಂತ್ರಿ ಬದಲಾವಣೆಗೆ ಒತ್ತಡ!

ಶೈಲೇಂದ್ರ ಸಿಂಗ್ ಅವರು ಕಳೆದ 15 ವರ್ಷಗಳಿಂದ ಸಾರ್ವಜನಿಕ ಸೇವೆ ಮತ್ತು ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಜಂಟಿ ಉಸ್ತುವಾರಿ ಮತ್ತು ಎಐಸಿಸಿಯ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಜೇಶ್ ಸಿಂಗ್ ಅವರು ತಮ್ಮ ವಿದ್ಯಾರ್ಥಿ ದಿನಗಳಿಂದಲೂ ಕಾಂಗ್ರೆಸ್‌ನ ಸಕ್ರಿಯ ಸದಸ್ಯರಾಗಿದ್ದರು. ಕಳೆದ 25 ವರ್ಷಗಳಿಂದ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಮತ್ತು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

ಅವರು ಎಐಸಿಸಿಯ ಚುನಾಯಿತ ಸದಸ್ಯರಾಗಿದ್ದರು. ಆದರೆ ಕಾಂಗ್ರೆಸ್ ನ ಪ್ರಸ್ತುತ ವಾತಾವರಣ ಮತ್ತು ಹಳೆಯ ಕಾಂಗ್ರೆಸ್ ಸದಸ್ಯರ ಮೇಲಿನ ನಿರ್ಲಕ್ಷ್ಯದಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇಬ್ಬರು ನಾಯಕರ ಆರೋಪಗಳು ಆಧಾರರಹಿತವಾಗಿವೆ. ಪ್ರಿಯಾಂಕಾ ಗಾಂಧಿ ಮತ್ತು ಲಲ್ಲು ಅವರ ನಾಯಕತ್ವದಲ್ಲಿ ‘ನ್ಯಾಯ ಪಂಚಾಯತ್’ ಮತ್ತು ಬೂತ್ ಮಟ್ಟಕ್ಕೆ ಕಾಂಗ್ರೆಸ್ ಬಲಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮತ್ತು ಅಲಹಾಬಾದ್ ಉಸ್ತುವಾರಿ ರಾಘವೇಂದ್ರ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಈ ಇಬ್ಬರೂ ರಾಜ್ಯ ನಾಯಕತ್ವದೊಂದಿಗೆ ಕೆಲವು ಭಿನ್ನಮತವನ್ನು ಹೊಂದಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಓಂ ಪ್ರಕಾಶ್ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಕಾಂಗ್ರೆಸ್‌ನಲ್ಲೂ ಭಿನ್ನಮತ; ಇಬ್ಬರು ನಾಯಕರ ಅಮಾನತು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights