ಮತಾಂತರ ವಿರೋಧಿ ಮಸೂದೆ ಚರ್ಚೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದಲ್ಲಿ ಚರ್ಚ್ ಧ್ವಂಸಗೊಳಿಸಿದ ದುಷ್ಕರ್ಮಿಗಳು

ರಾಜ್ಯದಲ್ಲಿ ಮತಾಂತರ ವಿರೋಧಿ ಮಸೂದೆಯ ಬಗ್ಗೆ ಚರ್ಚೆಯಾಗುತ್ತಿದೆ. ಇಂದು (ಡಿ.23) ವಿಧಾನಸಭೆಯಲ್ಲಿಯೂ ಭಾರೀ ಗದ್ದಲ ಸೃಷ್ಟಿಸಿದೆ. ಇದೇ ಸಂದರ್ಭದಲ್ಲಿ, 160 ವರ್ಷಗಳಷ್ಟು ಹಳೆಯದಾದ ಚರ್ಚ್‌ವೊಂದನ್ನು ಧ್ವಂಸಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸೂಸೈಪಾಳ್ಯದಲ್ಲಿರುವ ಸೇಂಟ್ ಜೋಸೆಫ್ ಚರ್ಚ್‌ನಲ್ಲಿದ್ದ ಸೇಂಟ್ ಆಂಥೋನಿಯ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆಗಾಗಿ ಪ್ರತಿಮೆಯನ್ನು ತೆಗೆದುಕೊಂಡು ಹೋಗಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದೆ.

ಗುರುವಾರ ಬೆಳಿಗ್ಗೆ 5.30 ರ ಸುಮಾರಿಗೆ ಚರ್ಚ್‌ ಮೇಲೆ ಕಿಡಿಗೇಡಿಗಳು ದಾಳಿ ಮಾಡಿ, ಪ್ರತಿಮೆಗೆ ಹಾನಿಗೊಳಿಸಿದ್ದಾರೆ ಎಂದು ಚರ್ಚ್‌ನ ಪಾದ್ರಿ ಫಾದರ್ ಜೋಸ್ಪೆ ಆಂಥೋನಿ ಡೇನಿಯಲ್ ತಿಳಿಸಿದ್ದಾರೆ.

ಬೆಳಗಿನ ಜಾವ 5.40ರ ವೇಳೆಗೆ ಪಾದ್ರಿಯೊಬ್ಬರು ಪ್ರತಿಮೆಗೆ ಹಾನಿಯಾಗಿರುವುದನ್ನು ಗಮನಿಸಿದ್ದಾರೆ. ಅವರು ಫಾದರ್ ಜೋಸೆಫ್‌ ಅವರಿಗೆ ಮಾಹಿತಿ ನೀಡಿದ್ದು, ಜೋಸೆಫ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ರೀತಿಯ ವಿಧ್ವಂಸಕ ಕೃತ್ಯ ಹಿಂದೆಂದೂ ನಡೆದಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ವಾರಗಳಲ್ಲಿ, ಕರ್ನಾಟಕದ ವಿವಿಧ ಭಾಗಗಳಲ್ಲಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಗಳಿಗೆ ಅಡಚಣೆಗಳನ್ನು ಉಂಟುಮಾಡುತ್ತಿರುವ ಕೃತ್ಯಗಳು ವರದಿಯಾಗಿವೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ರಕ್ಷಣೆ ಮಸೂದೆ ಎಂಬ ಹೊಸ ಮಸೂದೆಯನ್ನು ಮಂಡಿಸಲಾಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಈ ಮಸೂದೆಯು ಬಲವಂತದ ಮತಾಂತರವನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದು ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ ಎಂದು ವಿಮರ್ಶಕರು ಹೇಳುತ್ತಾರೆ.

ನಿನ್ನೆ ಬೆಂಗಳೂರಿನಲ್ಲಿ ಮಸೂದೆ ವಿರುದ್ಧ ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಎಂಇಎಸ್ ನಿಷೇಧಕ್ಕೆ ಆಗ್ರಹ: ಡಿಸೆಂಬರ್‌ 31ಕ್ಕೆ ಕರ್ನಾಟಕ ಬಂದ್!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights