FACT CHECK | ಹಂತಕ ಬಿಷ್ಣೋಯ್ ಪರ ಹೇಳಿಕೆ ನೀಡಿದ್ರಾ ರಕ್ಷಣಾ ಸಚಿವ ರಾಜನಾಥ್ ಸಿಂಗ್ ?
“ಲಾರೆನ್ಸ್ ಬಿಷ್ಣೋಯ್ ಪರವಾಗಿ ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾತನಾಡಿದ್ದಾರೆ. ಆ ಮೂಲಕ ದೇಶದಲ್ಲಿ ಹಂತಕನೊಬ್ಬನಿಗೆ ಬೆಂಬಲವನ್ನು ನೇರವಾಗಿ ಕೇಂದ್ರ ಸರ್ಕಾರ ಕೊಡುತ್ತಿದೆ ಎಂಬುದನ್ನು ಒಪ್ಪಿಕೊಂಡಿದೆ.” ಎಂದು ರಾಜನಾಥ ಸಿಂಗ್ ಅವರ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ” ರಾಜನಾಥ್ ಸಿಂಗ್ ಅವರು ಲಾರೆನ್ಸ್ ಬಿಷ್ಣೋಯ್ ಅನ್ನು ಯಾರು ಕೂಡ ಮುಟ್ಟಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ ಎಂದು ಹಲವರು ಬರೆದುಕೊಂಡಿದ್ದಾರೆ

ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್ಅನ್ನು ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ಕೂಡ ಹೊರಹಾಕಿದ್ದಾರೆ. ಹೀಗಾಗಿ ವೈರಲ್ ವಿಡಿಯೋ ಹಲವು ರೀತಿಯ ಚರ್ಚೆಗಳನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಹುಟ್ಟು ಹಾಕಿದೆ. ಹಾಗಿದ್ದರೆ ಈ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು, ಕೀ ಪ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, 29 ಜನವರಿ 2020 ರಂದು ರಾಜನಾಥ್ ಸಿಂಗ್ ಅವರ ಅಧಿಕೃತ YouTube ಚಾನಲ್ನಲ್ಲಿ ಲೈವ್ ಆಗಿರುವ ವಿಡಿಯೋವೊಂದು ಲಭ್ಯವಾಗಿದೆ. ಇದರಲ್ಲಿ ರಾಜನಾಥ ಸಿಂಗ್ ಅವರು ದೆಹಲಿಯ ಆದರ್ಶ ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಈ ವಿಡಿಯೋದ 47ನೇ ನಿಮಿಷದಲ್ಲಿ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಅವರು ಭಾರತದಲ್ಲಿರುವ ಮುಸಲ್ಮಾನರು ಈ ದೇಶದ ಪ್ರಜೆಗಳು. ಅವರ ಪೌರತ್ವವನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ರಕ್ಷಣಾ ಸಚಿವನಾಗಿ ಹೇಳುತ್ತಿದ್ದೇನೆ ಅವರನ್ನು ಮುಟ್ಟಲು ಸಾಧ್ಯವಿಲ್ಲ. ಇದು ನಾನು ನಿಮಗೆ ನೀಡುತ್ತಿರುವ ಭರವಸೆ ಎಂದು ಹೇಳಿಕೆ ನೀಡಿದ್ದಾರೆ. ಇಲ್ಲಿ ಎಲ್ಲಿಯೂ ಕೂಡ ಅವರು ಲಾರೆನ್ಸ್ ಬಿಷ್ಣೋಯ್ ಹೆಸರನ್ನ ಉಲ್ಲೇಖಿಸಲಾಗಿಲ್ಲ. ಈ ಬಗ್ಗೆ ಹೆಚ್ಚಿನ ಹುಡುಕಾಟವನ್ನು ನಡೆಸಿದಾಗ, 30 ಜನವರಿ 2020 ರಂದು ಆಜ್ತಕ್ ಸುದ್ದಿ ವೆಬ್ಸೈಟ್ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ, ಅದರಲ್ಲೂ ಇದೇ ಅಂಶವನ್ನು ಉಲ್ಲೇಖಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಲಾರೆನ್ಸ್ ಬಿಷ್ಣೋಯ್ ಪರವಾಗಿ ಮಾತನಾಡಿದ್ದಾರೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ ಇಲ್ಲ. 29 ಜನವರಿ 2020 ರಂದು ಮುಸಲ್ಮಾನರನ್ನು ಉದ್ದೇಶಿಸಿ ಮಾತನಾಡಿದ ವಿಡಿಯೋವೊಂದನ್ನು ಎಡಿಟ್ ಮಾಡಿ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ದಲಿತ ಹೆಣ್ಣು ಮಕ್ಕಳ ಬಗ್ಗೆ ಗೋಳ್ವಾಲ್ಕರ್ ತಮ್ಮ ಪುಸ್ತಕದಲ್ಲಿ ಈ ರೀತಿ ಹೇಳಿಲ್ಲ

