FACT CHECK | ಉಗ್ರಗಾಮಿಗಳು ಟರ್ಕಿ ಸೇನೆಯ ಹೆಲಿಕಾಪ್ಟರ್‌ಅನ್ನು ಹೊಡೆದುರುಳಿಸಿದ ದೃಶ್ಯವನ್ನು ಪಾಕಿಸ್ತಾನದ್ದು ಎಂದು ತಪ್ಪಾಗಿ ಹಂಚಿಕೆ

ತಾಲಿಬಾನ್ ಸೈನಿಕರು ಪಾಕಿಸ್ತಾನದ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ವೈರಲ್ ವಿಡಿಯೋದಲ್ಲಿ ರಾಕೆಟ್ ಲಾಂಚರ್‌ನಿಂದ ವ್ಯಕ್ತಿಯೊಬ್ಬ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸುವ ದೃಶ್ಯವನ್ನು ನೋಡಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಅಫ್ಗಾನಿಸ್ತಾನ್ ಗಡಿಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ ಹೊಡೆದುರುಳಿಸಿದ ತಾಲಿಬಾನಿಗಳು. ಇದರಲ್ಲಿ ಸುಮಾರು 20ಕ್ಕೂ ಹೆಚ್ಚು ಜನ ಸೈನಿಕರು ಸಾವು’’ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವಿಡಿಯೋವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುಂತೆ ತಾಲಿಬಾನ್ ಸೈನಿಕರು ಪಾಕಿಸ್ತಾನದ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ಹೇಳಲಾಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್​ನಲ್ಲಿ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮೇ 24, 2016 ರಂದು ಮಿರರ್ ಯುಕೆಎಂಬ ನ್ಯೂಸ್‌ ಔಟ್‌ಲೆಟ್‌ನಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ.

ವರದಿಯ ಪ್ರಕಾರ, ಕುರ್ದಿಶ್ ಉಗ್ರಗಾಮಿಗಳು ರಾಕೆಟ್ ಲಾಂಚರ್ ಬಳಸಿ ಟರ್ಕಿಯ ಸಶಸ್ತ್ರ ಪಡೆಗಳಿಗೆ ಸೇರಿದ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ಹೇಳುವ ವಿಡಿಯೋ ವರದಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಜೀ ನ್ಯೂಸ್ ಕೂಡ ಮೇ 14, 2016 ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ, “ಕುರ್ದ್ ಫೈಟರ್ ಟರ್ಕಿಶ್ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿತು” ಎಂದು ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಟರ್ಕಿಯ ಹಕ್ಕರಿ ಪ್ರಾಂತ್ಯದ ಆಗ್ನೇಯ ಪರ್ವತಗಳಲ್ಲಿ ವೀಡಿಯೊವನ್ನು ತೆಗೆದುಕೊಳ್ಳಲಾಗಿದೆ ಎಂದು Express.UK ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2016 ರಲ್ಲಿ ಕುರ್ದಿಶ್ ಉಗ್ರಗಾಮಿಗಳು ರಾಕೆಟ್ ಲಾಂಚರ್ ಬಳಸಿ ಟರ್ಕಿಯ ಸಶಸ್ತ್ರ ಪಡೆಗಳಿಗೆ ಸೇರಿದ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದ ವಿಡಿಯೋವನ್ನು, ತಾಲಿಬಾನ್ ಸೈನಿಕರು ಪಾಕಿಸ್ತಾನದ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಅಂಬೇಡ್ಕರ್ ಕುರಿತಾದ ಹೇಳಿಕೆಗಳಿಂದ BJP ಎದುರಿಸುತ್ತಿರುವ ಮುಜುಗರವನ್ನು ತಪ್ಪಿಸಿಕೊಳ್ಳಲು ಮತ್ತೊಮ್ಮೆ ಸುಳ್ಳು ಹೇಳಿದ ಸಂಘವರಿವಾರ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights