FACT CHECK | ದೆಹಲಿಯಲ್ಲಿ BJP ಅಧಿಕಾರಕ್ಕೆ ಬರುತ್ತಿದಂತೆ ಮಹಿಳೆಯರಿಗೆ ನೀಡಲಾಗುತ್ತಿದ್ದ ಉಚಿತ ಬಸ್ ಸೇವೆ ರದ್ದುಪಡಿಸಿದೆಯೇ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೆ ಮಹಿಳೆಯರಿಗೆ ನೀಡಲಾಗುತ್ತಿದ್ದ ಉಚಿತ ಬಸ್ ಸೇವೆ ನಿಂತುಹೋಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದು ಬಿಜೆಪಿ ಸರ್ಕಾರ ರಚಿಸುತ್ತಿದೆ. ಈ ಮಧ್ಯೆ, ಮಹಿಳೆಯರಿಗೆ ಉಚಿತ ಡಿಟಿಸಿ ಬಸ್ ಸೇವೆ ರದ್ದುಗೊಳಿಸಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

Ravinder Ramayan Aala ಎಂಬ ಫೇಸ್‌ಬುಕ್ ಬಳಕೆದಾರರು ಈ ಪೋಸ್ಟ್‌ಅನ್ನು ಹಂಚಿಕೊಂಡಿದ್ದು, “ಅಭಿನಂದನೆಗಳು ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ಡಿಟಿಸಿ (ದೆಹಲಿ ಸಾರಿಗೆ ನಿಗಮ) ಬಸ್ ಸೇವೆ ನಿಂತುಹೋಗಿದೆ” ಎಂದು ಬರೆದುಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಸರ್ಚ್ ಮಾಡಿದಾಗ, ಯಾವುದೇ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ ಸುದ್ದಿಯಾಗಲಿ, ಲೇಖನಗಳಾಗಲಿ ಲಭ್ಯವಿಲ್ಲ ಡಿಟಿಸಿ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ.

ಮತ್ತಷ್ಟು ಮಾಹಿತಿಗಾಗಿ ಡಿಟಿಸಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ವಿಚಾರಿಸಿದಾಗ, ಈ ರೀತಿಯ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಹೇಳಿದರು. ಈ ಮೂಲಕ ಡಿಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ನಿಲ್ಲಿಸಲಾಗಿದೆ ಎಂಬ ಸುದ್ದಿ ಸುಳ್ಳು. ಡಿಟಿಸಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಜನರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ದೃಢವಾಯಿತು.

ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆಯು ಒಂದು ಪ್ರಮುಖ ಸಾಮಾಜಿಕ ಕಲ್ಯಾಣ ಯೋಜನೆಯಾಗಿದೆ. ಇದು ಮಹಿಳೆಯರ ಸಬಲೀಕರಣಕ್ಕೆ ಸಹಾಯ ಮಾಡುತ್ತದೆ. ಉಚಿತ ಬಸ್ ಸೇವೆಯಿಂದಾಗಿ ಮಹಿಳೆಯರು ಸುಲಭವಾಗಿ ಕೆಲಸಕ್ಕೆ, ಶಿಕ್ಷಣಕ್ಕೆ ಮತ್ತು ಇತರ ಚಟುವಟಿಕೆಗಳಿಗೆ ಹೋಗಬಹುದು. ಈ ಸೌಲಭ್ಯವನ್ನು ರದ್ದುಗೊಳಿಸುವ ಯಾವುದೇ ಯೋಜನೆ ಸರ್ಕಾರಕ್ಕೆ ಇಲ್ಲ. ಸರ್ಕಾರವು ಮಹಿಳೆಯರ ಹಿತಾಸಕ್ತಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ತಿಳಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ದೆಹಲಿಯಲ್ಲಿ ಮಹಿಳೆಯರ ಉಚಿತ ಬಸ್‌ ಸೇವೆ ಸ್ಥಗಿತಗೊಂಡಿದೆ ಎಂಬ ಪೋಸ್ಟ್‌ ನಕಲಿಯಾಗಿದ್ದು, ಬಿಜೆಪಿ ಸರ್ಕಾರ ಅಥವಾ ದೆಹಲಿ ಸಾರಿಗೆ ನಿಗಮ ಇಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪಾಕ್‌ನ ಭೂ ಕಂಪನದ ವಿಡಿಯೋವನ್ನು ದೆಹಲಿಯದ್ದು ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights